ದೆಹಲಿ: ಕರ್ನಾಟಕ ಸಚಿವ ಸಂಪುಟ ಪುನಾರಚನೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಸಿರು ನಿಶಾನೆ ತೋರಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಚರ್ಚಿಸಿ ಪುನಾರಚನೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಖರ್ಗೆ ಮತ್ತು ಕೆ.ಸಿ. ವೇಣುಗೋಪಾಲ್ ಅವರೊಂದಿಗೆ ಸಮಾಲೋಚನೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ.
ಮೂಲಗಳ ಪ್ರಕಾರ, 8 ರಿಂದ 12 ಸಚಿವರನ್ನು ಸಂಪುಟದಿಂದ ಕೈಬಿಟ್ಟು ಹೊಸಬರಿಗೆ ಅವಕಾಶ ನೀಡುವ ಸಾಧ್ಯತೆಯಿದೆ. ಡಿಸೆಂಬರ್ ಮೊದಲ ವಾರದಲ್ಲೇ ಸಂಪುಟ ಸರ್ಜರಿ ನಡೆಯುವ ಸಾಧ್ಯತೆ ದಟ್ಟವಾಗಿದೆ.
ಅಧಿಕಾರ ಹಸ್ತಾಂತರದ ಜಿದ್ದಾಜಿದ್ದಿಯ ನಡುವೆಯೇ ಸಿಎಂ ಸಿದ್ದರಾಮಯ್ಯ ಸಂಪುಟ ಪುನಾರಚನೆಗೆ ರಾಹುಲ್ ಗಾಂಧಿಯವರ ಒಪ್ಪಿಗೆ ಪಡೆದಿರುವುದು ಮಾಸ್ಟರ್ ಸ್ಟ್ರೋಕ್ ಎಂದೇ ಹೇಳಲಾಗುತ್ತಿದೆ. ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಚರ್ಚಿಸಲು ರಾಹುಲ್ ಗಾಂಧಿ ಸೂಚಿಸಿದ್ದು, ಸೋಮವಾರ ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ದೆಹಲಿಗೆ ತೆರಳಿ ಖರ್ಗೆ ಅವರೊಂದಿಗೆ ಮಹತ್ವದ ಮಾತುಕತೆ ನಡೆಸಲಿದ್ದಾರೆ. ಅಂದೇ ಸಂಪುಟ ಪುನಾರಚನೆಗೆ ಅಂತಿಮ ಸ್ಪರ್ಶ ಸಿಗುವ ಸಾಧ್ಯತೆ ಇದೆ.
ಸಂಪುಟ ಪುನಾರಚನೆಗೆ ಸಿಗ್ನಲ್ ಸಿಕ್ಕ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ಬಿರುಸಿನ ಚಟುವಟಿಕೆಗಳು ಗರಿಗೆದರಿವೆ. ಸಚಿವ ಸ್ಥಾನದ ನಿರೀಕ್ಷೆಯಲ್ಲಿ ಹಲವು ಕಾಂಗ್ರೆಸ್ ನಾಯಕರು ಲಾಬಿ ನಡೆಸುತ್ತಿದ್ದಾರೆ.
ಬೇಳೂರು ಗೋಪಾಲಕೃಷ್ಣ, ಬಿ.ಕೆ.ಹರಿಪ್ರಸಾದ್, ಎನ್.ಎ.ಹ್ಯಾರಿಸ್, ಸಲೀಂ ಅಹಮದ್, ಆರ್.ವಿ.ದೇಶಪಾಂಡೆ, ನಾಗೇಂದ್ರ, ಎಂ.ಕೃಷ್ಣಪ್ಪ, ಮಾಗಡಿ ಬಾಲಕೃಷ್ಣ, ಲಕ್ಷ್ಮಣ ಸವದಿ, ಎಸ್.ಪೊನ್ನಣ್ಣ, ರಿಜ್ವಾನ್ ಅರ್ಷದ್, ಶಿವಲಿಂಗೇಗೌಡ, ರೂಪಕಲಾ ಶಶಿಧರ್, ಮಾಲೂರು ನಂಜೇಗೌಡ ಸೇರಿದಂತೆ ಹಲವು ಹಿರಿಯ ಮತ್ತು ಯುವ ನಾಯಕರು ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ.
ಸಂಪುಟ ಸರ್ಜರಿ ನಂತರ ಯಾರಿಗೆ ಅದೃಷ್ಟ ಒಲಿಯಲಿದೆ ಎಂಬುದು ಕಾದು ನೋಡಬೇಕು.






