ಬೆಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ (94) ಅವರು ಅನಾರೋಗ್ಯದ ಹಿನ್ನಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿರುವ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ, ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ವಿಷಯ ತಿಳಿಯುತ್ತಿದ್ದಂತೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಸ್ಪತ್ರೆಗೆ ದೌಡಾಯಿಸಿ, ಶಾಮನೂರು ಅವರ ಆರೋಗ್ಯ ವಿಚಾರಿಸಿದ್ದಾರೆ. ರಾಜ್ಯದ ಹಿರಿಯ ರಾಜಕಾರಣಿಯ ಯೋಗಕ್ಷೇಮವನ್ನು ಸಿಎಂ ಮತ್ತು ಡಿಸಿಎಂ ಖುದ್ದಾಗಿ ವಿಚಾರಿಸಿಕೊಂಡು ಕುಟುಂಬಸ್ಥರಿಗೆ ಧೈರ್ಯ ತುಂಬಿದ್ದಾರೆ.
ಈ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿದ್ದ ದಾವಣಗೆರೆ ಸಂಸದೆ ಹಾಗೂ ಶಾಮನೂರು ಅವರ ಸೊಸೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು, ಮಾವನವರ ಆರೋಗ್ಯ ಸ್ಥಿತಿಯ ಬಗ್ಗೆ ಮತ್ತು ನೀಡಲಾಗುತ್ತಿರುವ ಚಿಕಿತ್ಸೆಯ ಬಗ್ಗೆ ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಶಾಮನೂರು ಅವರು ವೈದ್ಯರ ನಿಗಾದಲ್ಲಿದ್ದು, ಚಿಕಿತ್ಸೆ ಮುಂದುವರಿದಿದೆ.






