ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಮಹತ್ವದ ಹೆಜ್ಜೆಯನ್ನಿಡಲು ಮುಂದಾಗಿರುವ ಮಲೇಷ್ಯಾ ಸರ್ಕಾರ, ಮುಂದಿನ ವರ್ಷದಿಂದ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳ ಬಳಕೆಯನ್ನು ನಿಷೇಧಿಸುವ ಕುರಿತು ಗಂಭೀರ ಚರ್ಚೆ ನಡೆಸುತ್ತಿದೆ.
ಈ ಕುರಿತು ಮಾಹಿತಿ ನೀಡಿರುವ ಮಲೇಷ್ಯಾದ ಸಂವಹನ ಸಚಿವ ಫಾಡ್ಮಿ ಫಡ್ಡಿಲ್, “ಮಕ್ಕಳ ಹಿತರಕ್ಷಣೆ ಮತ್ತು ಸುರಕ್ಷತೆಗಾಗಿ ಈ ಕ್ರಮ ಕೈಗೊಳ್ಳಲಾಗುತ್ತಿದೆ. 16 ವರ್ಷದೊಳಗಿನವರು ಸಾಮಾಜಿಕ ಜಾಲತಾಣದ ಖಾತೆಗಳಿಗೆ ಸೈನ್ ಇನ್ (Sign-in) ಮಾಡುವುದನ್ನು ನಿರ್ಬಂಧಿಸಲಾಗುವುದು. ಸರ್ಕಾರದ ಈ ನಿರ್ಧಾರಕ್ಕೆ ಸಾಮಾಜಿಕ ಜಾಲತಾಣ ಕಂಪನಿಗಳು ಹಾಗೂ ಪೋಷಕರು ಸಹಕಾರ ನೀಡುವ ವಿಶ್ವಾಸವಿದೆ,” ಎಂದು ಹೇಳಿದ್ದಾರೆ.
ಸಾಮಾಜಿಕ ಜಾಲತಾಣಗಳ ಬಳಕೆಗೆ ವಯಸ್ಸಿನ ಮಿತಿ ಹೇರುವ ಸರ್ಕಾರದ ಪ್ರಸ್ತಾವನೆಗೆ ದೇಶದಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಸಂಸದರು ಸೇರಿದಂತೆ ಶೇ. 72ರಷ್ಟು ಸಾರ್ವಜನಿಕರು ಸರ್ಕಾರದ ಈ ನಿರ್ಧಾರಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. ದೇಶದಲ್ಲಿ ಇಂಟರ್ನೆಟ್ ವೇಗದ ಜೊತೆಗೆ ಸುರಕ್ಷತೆಗೂ ಆದ್ಯತೆ ನೀಡಲಾಗುತ್ತಿದ್ದು, ಮಕ್ಕಳು ಮತ್ತು ಕುಟುಂಬಗಳ ಮಾಹಿತಿಯ ಗೌಪ್ಯತೆ ಕಾಪಾಡುವುದು ಇದರ ಪ್ರಮುಖ ಉದ್ದೇಶವಾಗಿದೆ.
ಸೈಬರ್ ಅಪರಾಧ ತಡೆಗೆ ಕಠಿಣ ಕ್ರಮ:
ಇತ್ತೀಚಿನ ವರ್ಷಗಳಲ್ಲಿ ಹೆಚ್ಚುತ್ತಿರುವ ಸೈಬರ್ ಅಪರಾಧಗಳಿಗೆ ಕಡಿವಾಣ ಹಾಕಲು ಮಲೇಷ್ಯಾ ಸರ್ಕಾರ ಹಲವು ನಿಯಮಗಳನ್ನು ಜಾರಿಗೆ ತರುತ್ತಿದೆ. ದೇಶದಲ್ಲಿ 80 ಲಕ್ಷಕ್ಕೂ ಅಧಿಕ ಬಳಕೆದಾರರನ್ನು ಹೊಂದಿರುವ ಸಾಮಾಜಿಕ ಮಾಧ್ಯಮ ಸಂಸ್ಥೆಗಳು ಕಡ್ಡಾಯವಾಗಿ ಸರ್ಕಾರದಿಂದ ಪರವಾನಗಿ ಪಡೆಯಬೇಕೆಂಬ ನಿಯಮವನ್ನು ಈಗಾಗಲೇ ಜಾರಿಗೊಳಿಸಲಾಗಿದೆ.
ಇನ್ನು ಈಗಾಗಲೇ ಆಸ್ಟ್ರೇಲಿಯಾ, ನ್ಯೂಜಿಲೆಂಡ್ ಮತ್ತು ನೆದರ್ಲೆಂಡ್ ಸೇರಿದಂತೆ ಹಲವು ದೇಶಗಳಲ್ಲಿ ಸಾಮಾಜಿಕ ಜಾಲತಾಣಗಳ ಬಳಕೆಗೆ ವಯಸ್ಸಿನ ನಿರ್ಬಂಧ ಜಾರಿಯಲ್ಲಿದೆ.






