ಇಸ್ಲಾಮಾಬಾದ್: ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಮಸಾಜ್ ಸೆಂಟರ್ ಒಂದರಲ್ಲಿ ಯುವತಿಯೊಬ್ಬಳ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಆಕೆಯ ತಲೆಗೂದಲು ಕತ್ತರಿಸಿ ವಿಕೃತಿ ಮೆರೆದಿರುವ ಆಘಾತಕಾರಿ ಘಟನೆ ನಡೆದಿದೆ. ಲೋಹಿ ಭೇರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ವರದಿಯಾಗಿದ್ದು, ಮಸಾಜ್ ಸೆಂಟರ್ ಮಾಲೀಕರು ಮತ್ತು ಕೆಲವು ಪ್ರಭಾವಿ ವ್ಯಕ್ತಿಗಳು ಸೇರಿ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.
ಲಭ್ಯ ಮಾಹಿತಿಯ ಪ್ರಕಾರ, ಮಸಾಜ್ ಸೆಂಟರ್‌ಗೆ ಬರುವ ಗ್ರಾಹಕರೊಂದಿಗೆ ಅಸಭ್ಯವಾಗಿ ವರ್ತಿಸಲು ಅಥವಾ ದೈಹಿಕ ಸಂಪರ್ಕ ಬೆಳೆಸಲು ನಿರಾಕರಿಸಿದ್ದಕ್ಕಾಗಿ ಯುವತಿಗೆ ಚಿತ್ರಹಿಂಸೆ ನೀಡಲಾಗಿದೆ. ಆರೋಪಿಗಳು ಕೇವಲ ಹಲ್ಲೆ ನಡೆಸಿ ಸುಮ್ಮನಾಗದೇ, ಆಕೆಯ ತಲೆಕೂದಲನ್ನು ಕತ್ತರಿಸಿ, ತಲೆ ಬೋಳಿಸುವ ಮೂಲಕ ಬ್ಲ್ಯಾಕ್‌ಮೇಲ್ ಮಾಡಿದ್ದಾರೆ. ಈ ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಇಸ್ಲಾಮಾಬಾದ್ ಎಸ್‌ಎಸ್‌ಪಿ (ಆಪರೇಷನ್ಸ್), ತಕ್ಷಣವೇ ಎಫ್‌ಐಆರ್ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಆದೇಶ ನೀಡಿದ್ದಾರೆ. ಕಾರ್ಯಾಚರಣೆ ನಡೆಸಿರುವ ಪೊಲೀಸರು, ಮಸಾಜ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಮಹಿಳೆಯರು ಸೇರಿದಂತೆ ಒಟ್ಟು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಮಹಿಳೆಯರ ಮೇಲಿನ ದೌರ್ಜನ್ಯವನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದು, ಬಂಧಿತ ಸಿಬ್ಬಂದಿ ವಿಚಾರಣೆ ಮುಂದುವರೆದಿದೆ.






