ಬೆಳಗಾವಿ: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (KSCA) ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಹಿರಿಯ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಹಾಗೂ ಕಾರ್ಯದರ್ಶಿ ಸಂತೋಷ್ ಮೆನನ್ ಅವರು ಬುಧವಾರ ಬೆಳಗಾವಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು.
ಸುವರ್ಣ ವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಬೀಡುಬಿಟ್ಟಿರುವ ಮುಖ್ಯಮಂತ್ರಿಗಳನ್ನು, ಕೆಎಸ್‌ಸಿಎಯ ನೂತನ ಪದಾಧಿಕಾರಿಗಳು ಸೌಜನ್ಯಯುತವಾಗಿ ಭೇಟಿಯಾಗಿ ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೂತನ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳಿಗೆ ಹೂಗುಚ್ಛ ನೀಡಿ ಅಭಿನಂದಿಸಿದರು. ರಾಜ್ಯದಲ್ಲಿ ಕ್ರಿಕೆಟ್ ಕ್ರೀಡೆಯ ಅಭಿವೃದ್ಧಿಗೆ ಮತ್ತು ಸಂಸ್ಥೆಯ ಮುಂದಿನ ಯೋಜನೆಗಳಿಗೆ ಸರ್ಕಾರದ ಸಂಪೂರ್ಣ ಸಹಕಾರವಿರುತ್ತದೆ ಎಂದು ಭರವಸೆ ನೀಡುತ್ತಾ, ಅವರ ಮುಂದಿನ ಅವಧಿಗೆ ಶುಭ ಹಾರೈಸಿದರು.
ಈ ಭೇಟಿಯ ವೇಳೆ ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್, ಶಾಸಕರು ಹಾಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (BDA) ಅಧ್ಯಕ್ಷರಾದ ಎನ್.ಎ. ಹ್ಯಾರಿಸ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಶಾಸಕರಾದ ಅಶೋಕ್ ಪಟ್ಟಣ್ ಹಾಗೂ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ್ ಹಟ್ಟಿಹೊಳಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.






