ರಾಮನಗರ: ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಮತ್ತೆ ತೀವ್ರಗೊಂಡಿರುವ ಬೆನ್ನಲ್ಲೇ, ರಾಮನಗರ ಶಾಸಕ ಇಕ್ಬಾಲ್ ಹುಸೇನ್ (Iqbal Hussain) ಅವರು ಸ್ಫೋಟಕ ಹೇಳಿಕೆ ನೀಡಿದ್ದು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (D.K. Shivakumar) ಅವರಿಗೆ ಮುಖ್ಯಮಂತ್ರಿ ಸ್ಥಾನ ದೊರೆಯುವುದು ಖಚಿತ ಎಂದು ಹೇಳಿದ್ದಾರೆ.
ಡಿ.ಕೆ.ಶಿವಕುಮಾರ್ ಅವರ ಹೋರಾಟ ಮತ್ತು ಶ್ರಮಕ್ಕೆ ಪ್ರತಿಫಲ ಸಿಗಬೇಕು. ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕು ಮತ್ತು ಅವಕಾಶ ಸಿಗಬೇಕು ಎಂದು ನಾವು ವರಿಷ್ಠರಿಗೆ ಮನವಿ ಮಾಡಿದ್ದೇವೆ. ಇದಕ್ಕೆ ಹೈಕಮಾಂಡ್ (High Command) ಸ್ಪಂದಿಸುತ್ತಿದೆ. ಬಹುಶಃ ಜ.6 ರಂದು ಅವರಿಗೆ ಸಿಎಂ ಸ್ಥಾನ ಸಿಗುವ ಶೇ.99 ರಷ್ಟು ವಿಶ್ವಾಸವಿದೆ. ಜ.6 ಮತ್ತು ಜ.9 ಅವರ ಅದೃಷ್ಟ ಸಂಖ್ಯೆ ಎಂದು ಶಾಸಕರು ಹೇಳಿದ್ದಾರೆ.
ಯತೀಂದ್ರಗೆ ತಿರುಗೇಟು:
ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ (Yatindra Siddaramaiah) ಅವರು ನಾಯಕತ್ವ ಬದಲಾವಣೆ ಇಲ್ಲ ಎಂದು ಹೇಳಿದ್ದ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಯಾರು ಏನೇ ಹೇಳಿಕೊಳ್ಳಲಿ, ರಾಜ್ಯದ ಜನ ಹಾಗೂ ಈ ಭಾಗದ ಶಾಸಕರು ಡಿ.ಕೆ.ಶಿವಕುಮಾರ್‌ಗೆ ಅವಕಾಶ ಕೊಡಿ ಅಂತ ಕೇಳಿದ್ದೇವೆ. ಡಿ.ಕೆ.ಶಿವಕುಮಾರ್ ಸಿಎಂ ಆಗೋದು ಖಚಿತ,” ಎಂದು ಪುನರುಚ್ಚರಿಸಿದರು.
ಸಂಖ್ಯಾಬಲದ ವಿಚಾರ ಇಲ್ಲ:
ಪಕ್ಷದಲ್ಲಿ ಯಾವುದೇ ಬಣಗಳಿಲ್ಲ ಎಂದು ಸ್ಪಷ್ಟಪಡಿಸಿದ ಶಾಸಕರು, “ಸಿದ್ದರಾಮಯ್ಯ (Siddaramaiah) ಮತ್ತು ಡಿ.ಕೆ.ಶಿವಕುಮಾರ್ ಇಬ್ಬರೂ ರಾಜ್ಯದ ಆಸ್ತಿ. ನಮ್ಮಲ್ಲಿ ಸಂಖ್ಯಾಬಲದ ವಿಚಾರ ಬರಲ್ಲ, ಕಾಂಗ್ರೆಸ್ ಪಕ್ಷ ಶಿಸ್ತಿನ ಪಕ್ಷ. ವರಿಷ್ಠರ ತೀರ್ಮಾನಕ್ಕೆ ಎಲ್ಲರೂ ಬದ್ಧ,” ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾತನಾಡಿದ ಇಕ್ಬಾಲ್ ಹುಸೇನ್, ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ತಾವು ಓಟ್ ಚೋರಿ ವಿರುದ್ಧದ ಬೃಹತ್ ಪ್ರತಿಭಟನೆಗಾಗಿ ದೆಹಲಿಗೆ ತೆರಳುತ್ತಿರುವುದಾಗಿ ತಿಳಿಸಿದರು.






