Home State Politics National More
STATE NEWS

Sad News | ಹಿರಿಯ ರಾಜಕಾರಣಿ ಶಾಮನೂರು ಶಿವಶಂಕರಪ್ಪ ವಿಧಿವಶ: ಇಂದು ಶಾಲಾ-ಕಾಲೇಜುಗಳಿಗೆ ರಜೆ

Senior congress mla shamanur shivashankarappa pass
Posted By: Sagaradventure
Updated on: Dec 15, 2025 | 2:12 AM

ದಾವಣಗೆರೆ: ರಾಜ್ಯ ರಾಜಕಾರಣದ ಹಿರಿಯ ಕೊಂಡಿ, ಅಖಿಲ ಭಾರತ ವೀರಶೈವ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕರಾದ ಶಾಮನೂರು ಶಿವಶಂಕರಪ್ಪ (94) ಅವರು ಭಾನುವಾರ ಸಂಜೆ ವಿಧಿವಶರಾಗಿದ್ದಾರೆ.

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಡಿ.14ರಂದು ಇಹಲೋಕ ತ್ಯಜಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಗೌರವ ಸೂಚಕವಾಗಿ ಇಂದು(ಡಿ.15) ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯ ಎಲ್ಲಾ ಅಂಗನವಾಡಿ, ಶಾಲಾ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಆದೇಶ ಹೊರಡಿಸಿದ್ದಾರೆ.

ಶಾಮನೂರು ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನಿಂದ ದಾವಣಗೆರೆಗೆ ರವಾನಿಸಲಾಗಿದ್ದು, ಇಂದು (ಡಿ.15) ಬೆಳಿಗ್ಗೆ 6 ಗಂಟೆಗೆ ದಾವಣಗೆರೆ ತಲುಪಿದೆ. ಬೆಳಿಗ್ಗೆ 7 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಅವರ ಪುತ್ರ ಎಸ್.ಎಸ್. ಮಲ್ಲಿಕಾರ್ಜುನ ಅವರ ನಿವಾಸದಲ್ಲಿ ಆಪ್ತರು ಹಾಗೂ ಕುಟುಂಬಸ್ಥರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

​ತದನಂತರ, ಮಧ್ಯಾಹ್ನ 12 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ದಾವಣಗೆರೆಯ ಹೈಸ್ಕೂಲ್ ಮೈದಾನದಲ್ಲಿ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಸಂಜೆ 4 ಗಂಟೆಯ ನಂತರ ಕಲ್ಲೇಶ್ವರ ರೈಸ್ ಮಿಲ್ ಆವರಣದಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

​ಸಿಎಂ ಸಿದ್ದರಾಮಯ್ಯ ಕಂಬನಿ:
ಹಿರಿಯ ನಾಯಕನ ಅಗಲಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ಸೂಚಿಸಿದ್ದಾರೆ. “ಪಕ್ಷದ ಹಿರಿಯ ನಾಯಕರು ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ ಅವರ ನಿಧನವಾರ್ತೆ ತೀವ್ರ ನೋವುಂಟುಮಾಡಿದೆ. ದೀರ್ಘಕಾಲದ ತಮ್ಮ ರಾಜಕೀಯ ಜೀವನದಲ್ಲಿ ಕಳಂಕವಿಲ್ಲದೆ, ಸಿಕ್ಕ ಅಧಿಕಾರವನ್ನು ಜನಸೇವೆಗೇ ಮುಡುಪಾಗಿಟ್ಟಿದ್ದ ಮುತ್ಸದ್ದಿ ನಾಯಕ ಅವರು. ದಾವಣಗೆರೆಯನ್ನು ಮಾದರಿ ಜಿಲ್ಲೆಯನ್ನಾಗಿ ರೂಪಿಸಿದ ಅವರ ಸೇವೆ ಜನಮಾನಸದಲ್ಲಿ ಶಾಶ್ವತವಾಗಿ ಉಳಿಯಲಿದೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಕರುಣಿಸಲಿ” ಎಂದು ಸಿಎಂ ಶೋಕ ವ್ಯಕ್ತಪಡಿಸಿದ್ದಾರೆ.

Shorts Shorts