ಪಾವಗಡ : ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ಕಡಮಲಕುಂಟೆ (Kadamalakunte) ಕೈಗಾರಿಕಾ ಪ್ರದೇಶದ ಬಳಿ ಶನಿವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ವ್ಯಕ್ತಿ ದುರ್ಮರಣಕ್ಕೀಡಾಗಿದ್ದಾರೆ. ಇನ್ನೋವಾ ಕಾರು (Innova car) ಮತ್ತು ಆಂಧ್ರಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (APSRTC) ಬಸ್ ನಡುವೆ ನಡೆದ ಈ ಮುಖಾಮುಖಿ ಡಿಕ್ಕಿಯಾಗಿ ಈ ಘಟನೆ ಸಂಭವಿಸಿದೆ.
ಪಾವಗಡ ತಾಲ್ಲೂಕಿನ ಐವಾರ್ಲಹಳ್ಳಿ ಗ್ರಾಮದ ನಿವಾಸಿ ರಾಜಶೇಖರ್ ರೆಡ್ಡಿ (40)(Rajshekhar Reddy) ಅವರು ಅಪಘಾತದ ತೀವ್ರತೆಗೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇವರು ಇನ್ನೋವಾ ಕಾರನ್ನು ಚಾಲನೆ ಮಾಡುತ್ತಿದ್ದರು. ಡಿಕ್ಕಿಯ ರಭಸಕ್ಕೆ ಆಂಧ್ರದ ಬಸ್ ರಸ್ತೆ ಪಕ್ಕದ ಹಳ್ಳಕ್ಕೆ ನುಗ್ಗಿದೆ. ಕಾರು ಮತ್ತು ಬಸ್ ಎರಡೂ ಅತೀ ವೇಗದಲ್ಲಿದ್ದದ್ದೇ ಈ ಘಟನೆಗೆ ಕಾರಣ ಎನ್ನಲಾಗಿದೆ.
ಬಸ್‌ನಲ್ಲಿದ್ದ ಸುಮಾರು 25ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಪಾವಗಡ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಳಗ್ಗೆ ಸುಮಾರು 7 ಗಂಟೆ ಸಮಯದಲ್ಲಿ ಈ ಅವಘಡ ಸಂಭವಿಸಿದೆ. ವಿಷಯ ತಿಳಿಯುತ್ತಿದ್ದಂತೆಯೇ ಇನ್ಸ್ಪೆಕ್ಟರ್ ಸುರೇಶ್ ಹಾಗೂ ಪಾವಗಡ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪಾವಗಡ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.






