ಹಾವೇರಿ: ನಗರದ ಹೊರವಲಯದ ದೇವಗಿರಿ ಗ್ರಾಮದಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 14ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿರುವ ಆತಂಕಕಾರಿ ಘಟನೆ ನಡೆದಿದೆ.
ಶನಿವಾರ ರಾತ್ರಿ ಹಾಸ್ಟೆಲ್‌ನಲ್ಲಿ ಊಟಕ್ಕೆ ಹೋಳಿಗೆ ಮತ್ತು ರೈಸ್ ಸಾಂಬಾರ್ ನೀಡಲಾಗಿತ್ತು. ಈ ಊಟ ಸೇವಿಸಿದ ವಿದ್ಯಾರ್ಥಿನಿಯರಿಗೆ ಭಾನುವಾರ ಬೆಳಿಗ್ಗೆ ಏಕಾಏಕಿ ತೀವ್ರ ಹೊಟ್ಟೆನೋವು ಮತ್ತು ವಾಂತಿ ಕಾಣಿಸಿಕೊಂಡಿದೆ. ತಕ್ಷಣವೇ ಎಚ್ಚೆತ್ತ ಸಿಬ್ಬಂದಿ ಅಸ್ವಸ್ಥ ವಿದ್ಯಾರ್ಥಿನಿಯರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ತಪ್ಪೊಪ್ಪಿಕೊಂಡ ಮೆಸ್ ಮಾಲೀಕ:
ಹಾಸ್ಟೆಲ್‌ಗೆ ‘ಅನ್ನಪೂರ್ಣೇಶ್ವರಿ ಖಾಸಗಿ ಮೆಸ್’ ನಿಂದ ಊಟ ಸರಬರಾಜು ಮಾಡಲಾಗುತ್ತಿತ್ತು. ಘಟನೆಗೆ ಸಂಬಂಧಿಸಿದಂತೆ ಮೆಸ್ ಮಾಲೀಕರು ಕಳಪೆ ಗುಣಮಟ್ಟದ ಆಹಾರ ಪದಾರ್ಥಗಳನ್ನು ಬಳಸಿದ್ದಾಗಿ ತಪ್ಪೊಪ್ಪಿಕೊಂಡಿದ್ದಾರೆ. ಅಲ್ಲದೆ, ಅಸ್ವಸ್ಥ ವಿದ್ಯಾರ್ಥಿನಿಯರ ಸಂಪೂರ್ಣ ವೈದ್ಯಕೀಯ ವೆಚ್ಚವನ್ನು ಭರಿಸುವುದಾಗಿ ಭರವಸೆ ನೀಡಿದ್ದಾರೆ.
ಹಾಸ್ಟೆಲ್ ಸಿಬ್ಬಂದಿಯ ನಿರ್ಲಕ್ಷ್ಯವೇ ಈ ಘಟನೆಗೆ ಕಾರಣ ಎಂದು ಆರೋಪಿಸಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಹಿರಿಯ ಅಧಿಕಾರಿಗಳು ಹಾಸ್ಟೆಲ್‌ಗೆ ಮತ್ತು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಬೇಕು ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪಾಲಕರು ಒತ್ತಾಯಿಸಿದ್ದಾರೆ.






