ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ವಸತಿ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ (Zameer Ahmed Khan) ಅವರಿಗೆ ಲೋಕಾಯುಕ್ತ ಪೊಲೀಸರು ಬಿಗ್ ಶಾಕ್ ನೀಡಿದ್ದಾರೆ. ಜಮೀರ್ ಅವರ ಆಪ್ತ ಕಾರ್ಯದರ್ಶಿ (PS) ಸರ್ಫರಾಜ್ (Sarfaraz) ಅವರಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಇಂದು ಬೆಳ್ಳಂಬೆಳಗ್ಗೆ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ.
ಬೆಂಗಳೂರಿನ ಹಲಸೂರು (Ulsoor) ನಿವಾಸ ಸೇರಿದಂತೆ ರಾಜ್ಯದ ಒಟ್ಟು 10 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ. ಸಚಿವರ ಪಿಎಸ್ ಸರ್ಫರಾಜ್ ಅವರಿಗೆ ಸೇರಿದ 5 ಮನೆಗಳ ಮೇಲೆ ದಾಳಿ ನಡೆದಿದೆ. ಇವರ ಅಕ್ರಮ ಆಸ್ತಿ ಗಳಿಕೆಯ ಬಗ್ಗೆ ಬಂದ ದೂರುಗಳ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಕೊಡಗು (Kodagu) ಜಿಲ್ಲೆಯಲ್ಲಿರುವ ಸರ್ಫರಾಜ್ ಅವರಿಗೆ ಸೇರಿದ ಎನ್ನಲಾದ ಮನೆ ಹಾಗೂ ರೆಸಾರ್ಟ್‌ಗಳ ಮೇಲೆಯೂ ಲೋಕಾಯುಕ್ತ ತಂಡಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿವೆ. ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ (Disproportionate Assets) ಆರೋಪಕ್ಕೆ ಸಂಬಂಧಿಸಿದಂತೆ ಬ್ಯಾಂಕ್ ದಾಖಲೆಗಳು, ಆಸ್ತಿ ಪತ್ರಗಳು ಮತ್ತು ಹೂಡಿಕೆಯ ವಿವರಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಈ ಹಿಂದೆ ಇಡಿ (ED) ನೀಡಿದ್ದ ವರದಿಯ ಆಧಾರದ ಮೇಲೆ ಲೋಕಾಯುಕ್ತದಲ್ಲಿ ಅಕ್ರಮ ಆಸ್ತಿ ಗಳಿಕೆ ಪ್ರಕರಣ ದಾಖಲಾಗಿತ್ತು. ಇತ್ತೀಚೆಗಷ್ಟೇ ಸಚಿವರಿಗೆ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ನೋಟಿಸ್ ನೀಡಿತ್ತು. ಈಗ ಅವರ ಆಪ್ತ ಸಿಬ್ಬಂದಿಯ ಮೇಲೆ ನಡೆದಿರುವ ದಾಳಿಯು ಸಚಿವರಿಗೆ ಮತ್ತಷ್ಟು ಕಾನೂನು ಸಂಕಷ್ಟ ತಂದೊಡ್ಡುವ ಸಾಧ್ಯತೆ ಇದೆ.






