ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ ಜವರಗೊಂಡನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಗುರುವಾರ (ಡಿ.25) ನಸುಕಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಖಾಸಗಿ ಬಸ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ 12ಕ್ಕೂ ಹೆಚ್ಚು ಮಂದಿ ಸ*ಜೀವ ದ*ಹನಗೊಂಡಿದ್ದಾರೆ ಎಂದು ವರದಿಯಾಗಿದೆ. ಘಟನೆಯಲ್ಲಿ 25ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಸಾ*ವಿನ ಸಂಖ್ಯೆ ಹೆಚ್ಚಾಗುವ ಆತಂಕ ಎದುರಾಗಿದೆ.
ನಸುಕಿನ 2 ಗಂಟೆಯ ಸುಮಾರಿಗೆ ಈ ದುರಂತ ಸಂಭವಿಸಿದೆ. ಹಿರಿಯೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಏರಿ, ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಖಾಸಗಿ ಬಸ್‌ಗೆ ರಭಸವಾಗಿ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಡೀಸೆಲ್ ಟ್ಯಾಂಕ್ ಸ್ಫೋಟಗೊಂಡು ಬಸ್ ಮತ್ತು ಲಾರಿ ಎರಡೂ ಬೆಂಕಿಗಾಹುತಿಯಾಗಿವೆ. ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಲಾರಿ ಚಾಲಕ ಕುಲದೀಪ್ ಸ್ಥಳದಲ್ಲೇ ಮೃ*ತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿದ್ದ ಬಸ್:
ಅಪಘಾತಕ್ಕೀಡಾದ ಖಾಸಗಿ ಬಸ್ ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿತ್ತು. ಬಸ್‌ನಲ್ಲಿ ಚಾಲಕ ಮತ್ತು ನಿರ್ವಾಹಕ ಸೇರಿದಂತೆ ಒಟ್ಟು 31 ಮಂದಿ ಪ್ರಯಾಣಿಸುತ್ತಿದ್ದರು. ಗೋಕರ್ಣದ 25, ಕುಮಟಾದ ಇಬ್ಬರು ಹಾಗೂ ಶಿವಮೊಗ್ಗದ ಇಬ್ಬರು ಪ್ರಯಾಣಿಕರಿದ್ದರು. ಅಪಘಾತ ಸಂಭವಿಸುತ್ತಿದ್ದಂತೆಯೇ ಬಸ್ ಚಾಲಕ, ನಿರ್ವಾಹಕ ಹಾಗೂ ಕೆಲವು ಪ್ರಯಾಣಿಕರು ಬಸ್‌ನಿಂದ ಹೊರಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಗಾಯಾಳುಗಳನ್ನು ಹಿರಿಯೂರು ಸೇರಿದಂತೆ ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಹೆದ್ದಾರಿಯಲ್ಲಿ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್:
ಅಪಘಾತದ ತೀವ್ರತೆಗೆ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಯಿತು. ಹಿರಿಯೂರಿನಿಂದ ಶಿರಾವರೆಗೂ ಸುಮಾರು 30 ಕಿ.ಮೀ.ವರೆಗೆ ವಾಹನಗಳು ಸಾಲುಗಟ್ಟಿ ನಿಂತಿದ್ದು, ಸಾವಿರಾರು ವಾಹನ ಸವಾರರು ಪರದಾಡುವಂತಾಯಿತು. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ರಂಜಿತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಯಾಣಿಕರ ಪಟ್ಟಿ (ಬುಕ್ಕಿಂಗ್ ಆಧಾರದಲ್ಲಿ):
ಲಭ್ಯವಿರುವ ಮಾಹಿತಿಯ ಪ್ರಕಾರ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದವರ ವಿವರ ಹೀಗಿದೆ: ಮಂಜುನಾಥ್, ಸಂಧ್ಯಾ, ಶಶಾಂಕ್, ದಿಲೀಪ್, ಪ್ರೀತೀಶ್ವರನ್, ವಿ.ಬಿಂದು, ಕೆ.ಕವಿತಾ, ಅನಿರುದ್ ಬ್ಯಾನರ್ಜಿ, ಅಮೃತಾ, ಇಶಾ, ಸೂರಜ್, ಮಾನಸ, ಮಿಲನಾ, ಹೇಮರಾಜ್‌ಕುಮಾರ್, ಕಲ್ಪನಾ ಪ್ರಜಾಪತಿ, ಎಂ.ಶಶಿಕಾಂತ್, ವಿಜಯ್ ಭಂಡಾರಿ, ನವ್ಯಾ, ಅಭಿಷೇಕ್, ಎಚ್.ಕಿರಣ್ ಪಾಲ್ ಹಾಗೂ ಎಂ.ಕೀರ್ತನ್. ಮೃತರ ಮತ್ತು ಗಾಯಾಳುಗಳ ನಿಖರವಾದ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ.






