ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ಬಳಿ ಖಾಸಗಿ ಬಸ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತ ಹಾಗೂ ಅಗ್ನಿ ಅವಘಡದಲ್ಲಿ ಹಲವರು ಸಜೀವ ದಹನವಾದ ಘಟನೆ ಇಡೀ ನಾಡನ್ನೇ ಬೆಚ್ಚಿಬೀಳಿಸಿದೆ. ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಬಸ್ ಅಗ್ನಿಗಾಹುತಿಯಾಗಿದ್ದು, ಈ ಘೋರ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಗಣ್ಯರು ತೀವ್ರ ಕಂಬನಿ ಮಿಡಿದಿದ್ದಾರೆ.
ಘಟನೆಯ ಕುರಿತು ತೀವ್ರ ಆಘಾತ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, “ಚಿತ್ರದುರ್ಗದ ದುರಂತದ ಸುದ್ದಿ ತಿಳಿದು ತೀವ್ರ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ” ಎಂದು ಟ್ವೀಟ್ ಮಾಡಿದ್ದಾರೆ. ಇದೇ ವೇಳೆ ಮೃತರ ಕುಟುಂಬಕ್ಕೆ ಪ್ರಧಾನಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರವನ್ನು ಘೋಷಿಸಿದ್ದಾರೆ.

ಇದನ್ನೂ ಓದಿ: ????Deadly Accident | ಗೋಕರ್ಣಕ್ಕೆ ಹೊರಟಿದ್ದ ಬಸ್ ಚಿತ್ರದುರ್ಗದಲ್ಲಿ ಭೀಕರ ಅಪಘಾತ: 12ಕ್ಕೂ ಹೆಚ್ಚು ಮಂದಿ ಸ*ಜೀವ ದ*ಹನ!
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘಟನೆಯ ಬಗ್ಗೆ ಪ್ರತಿಕ್ರಿಯಿಸುತ್ತಾ, “ಲಾರಿ ಮತ್ತು ಬಸ್ ನಡುವಿನ ಅಪಘಾತದಲ್ಲಿ ಪ್ರಯಾಣಿಕರು ಸಜೀವ ದಹನವಾದ ಸುದ್ದಿ ಕೇಳಿ ಎದೆ ನಡುಗಿತು. ಕ್ರಿಸ್‌ಮಸ್ ರಜೆಯ ಸಂಭ್ರಮದಲ್ಲಿ ಊರಿಗೆ ತೆರಳುತ್ತಿದ್ದವರ ಪ್ರಯಾಣ ಹೀಗೆ ದುರಂತದಲ್ಲಿ ಅಂತ್ಯಗೊಂಡಿರುವುದು ಅತ್ಯಂತ ವಿಷಾದನೀಯ” ಎಂದು ಭಾವುಕರಾಗಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಕೋರಿರುವ ಸಿಎಂ, ಅಪಘಾತದ ಬಗ್ಗೆ ಸೂಕ್ತ ತನಿಖೆ ನಡೆಸಿ ಕಾರಣ ಪತ್ತೆಹಚ್ಚಲಾಗುವುದು ಎಂದು ಭರವಸೆ ನೀಡಿದ್ದಾರೆ.
ಇನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, “ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಬಸ್ ಹಿರಿಯೂರು ಬಳಿ ಅಪಘಾತಕ್ಕೀಡಾಗಿ ಹಲವರು ಪ್ರಾಣ ಕಳೆದುಕೊಂಡಿರುವುದು ತೀವ್ರ ಆಘಾತ ತಂದಿದೆ. ಮೃತರ ಕುಟುಂಬದ ದುಃಖದಲ್ಲಿ ನಾನೂ ಭಾಗಿಯಾಗಿದ್ದು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ಇಂತಹ ದುರಂತಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕಿದೆ” ಎಂದು ಸಂತಾಪ ಸೂಚಿಸಿದ್ದಾರೆ.






