ಕಾರವಾರ: ಕರ್ನಾಟಕದ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ (D.K. Shivakumar) ಅವರು ಡಿಸೆಂಬರ್ 28, ಭಾನುವಾರದಂದು ಉತ್ತರ ಕನ್ನಡ ಜಿಲ್ಲೆಯ ಕಾರವಾರಕ್ಕೆ ಭೇಟಿ ನೀಡಲಿದ್ದು, ಸುಪ್ರಸಿದ್ಧ ‘ಕರಾವಳಿ ಉತ್ಸವ’ದಲ್ಲಿ ಭಾಗವಹಿಸಲಿದ್ದಾರೆ. ಅವರ ಪ್ರವಾಸದ ಅಧಿಕೃತ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.
ಡಿ.ಕೆ.ಶಿವಕುಮಾರ್ ಅವರು ಭಾನುವಾರ ಮಧ್ಯಾಹ್ನ 3.30ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇಂಡಿಗೋ ವಿಮಾನದ (6E-6755) ಮೂಲಕ ಪ್ರಯಾಣ ಬೆಳೆಸಿ, ಸಂಜೆ 4.50ಕ್ಕೆ ಗೋವಾದ ದಾಬೋಲಿಮ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಲಿದ್ದಾರೆ. ಅಲ್ಲಿಂದ ರಸ್ತೆ ಮಾರ್ಗದ ಮೂಲಕ ಸಂಜೆ 6.30ರ ಸುಮಾರಿಗೆ ಕಾರವಾರಕ್ಕೆ ಆಗಮಿಸಲಿದ್ದಾರೆ.

ಸಂಜೆ 7 ಗಂಟೆಗೆ ಕಾರವಾರದ ರವೀಂದ್ರನಾಥ ಟ್ಯಾಗೋರ್ ಕಡಲತೀರದಲ್ಲಿ (Tagore Beach) ನಡೆಯಲಿರುವ ವರ್ಣರಂಜಿತ “ಕರಾವಳಿ ಉತ್ಸವ” ಕಾರ್ಯಕ್ರಮದಲ್ಲಿ ಡಿಸಿಎಂ ಪಾಲ್ಗೊಳ್ಳಲಿದ್ದಾರೆ. ಅಂದು ರಾತ್ರಿ ಸ್ಥಳೀಯ ಆಡಳಿತ ನಿಗದಿಪಡಿಸಿದ ಸ್ಥಳದಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಮರುದಿನ, ಅಂದರೆ ಡಿಸೆಂಬರ್ 29ರ ಸೋಮವಾರ ಬೆಳಿಗ್ಗೆ 9 ಗಂಟೆಗೆ ಗೋವಾದ ದಾಬೋಲಿಮ್ ವಿಮಾನ ನಿಲ್ದಾಣದಿಂದ ಹೊರಟು, ಬೆಳಿಗ್ಗೆ 10.20ಕ್ಕೆ ಬೆಂಗಳೂರಿಗೆ ವಾಪಸಾಗಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.






