ಬೆಂಗಳೂರು: ಹುಬ್ಬಳ್ಳಿ ಸೇರಿದಂತೆ ರಾಜ್ಯದ ವಿವಿಧೆಡೆ ನಡೆದ ಭೀಕರ ಮರ್ಯಾದೆ ಹತ್ಯೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah) ಇದನ್ನು ತಡೆಗಟ್ಟಲು ಶೀಘ್ರವೇ ವಿಶೇಷ ಕಾನೂನು ಜಾರಿಗೆ ತರುವುದಾಗಿ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಕೇವಲ ಕಾನೂನು ತಂದರೆ ಸಾಲದು, ಅದನ್ನು ಗಂಭೀರವಾಗಿ ಅನುಷ್ಠಾನಕ್ಕೆ ತರುವ ಕೆಲಸವಾಗಬೇಕು. ಹುಬ್ಬಳ್ಳಿಯ ಇನಾಂ ವೀರಾಪುರದಲ್ಲಿ ಹತ್ಯೆಗೊಳಗಾದ ಗರ್ಭಿಣಿ ಮಹಿಳೆ ಮನ್ಯಾ ಪಾಟೀಲ್ ಅವರ ಹೆಸರಿನಲ್ಲಿ ‘ಮನ್ಯಾ ಕಾಯ್ದೆ’ ಜಾರಿಗೆ ತರಬೇಕು ಎಂದು ವಿವಿಧ ಸಂಘಟನೆಗಳು ಒತ್ತಾಯಿಸಿದ್ದಾರೆ.
ಅಂತರ್ಜಾತಿ ವಿವಾಹವಾದ ದಂಪತಿಗಳ ಸುರಕ್ಷತೆಗೆ ಆದ್ಯತೆ ನೀಡುವುದಾಗಿ ಮತ್ತು ಇಂತಹ ಪ್ರಕರಣಗಳಲ್ಲಿ ತನಿಖೆಯಲ್ಲಿ ಯಾವುದೇ ಲೋಪವಾಗದಂತೆ ಎಚ್ಚರ ವಹಿಸುವುದಾಗಿ ಭರವಸೆ ನೀಡಿದರು.
ಮರ್ಯಾದೆ ಹತ್ಯೆಯಂತಹ ಪ್ರಕರಣಗಳು ಸಮಾಜದಲ್ಲಿನ ಜಾತಿ ವ್ಯವಸ್ಥೆಯ ಹೀನ ಮನಸ್ಥಿತಿಯನ್ನು ಪ್ರತಿಫಲಿಸುತ್ತವೆ ಎಂದು ಬೇಸರ ವ್ಯಕ್ತಪಡಿಸಿದ ಅವರು, ಸಮಾಜದಲ್ಲಿ ಪರಿವರ್ತನೆ ತರಲು ಜಾಗೃತಿ ಮೂಡಿಸುವುದು ಅತ್ಯಗತ್ಯ ಎಂದಿದ್ದಾರೆ.
ಕನ್ನಡಿಗರಿಗೆ ಉದ್ಯೋಗ ಮೀಸಲಾತಿ:
ಕನ್ನಡಿಗರಿಗೆ ಖಾಸಗಿ ವಲಯದ ಉದ್ಯೋಗಗಳಲ್ಲಿ ಮೀಸಲಾತಿ ನೀಡುವ ಬಹುದಿನಗಳ ಬೇಡಿಕೆಯ ಕುರಿತು ಮುಖ್ಯಮಂತ್ರಿಗಳು ಇದೀಗ ಮಹತ್ವದ ಅಪ್‌ಡೇಟ್ ನೀಡಿದ್ದಾರೆ.
ಖಾಸಗಿ ಕೈಗಾರಿಕೆಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಮಸೂದೆಯ ಕುರಿತು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ವಿಸ್ತೃತವಾಗಿ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಈ ಹಿಂದಿನ ಮಸೂದೆಯಲ್ಲಿನ ಕೆಲವು ಗೊಂದಲಗಳನ್ನು ನಿವಾರಿಸಿ, ಉದ್ಯಮಿಗಳ ಮತ್ತು ಕಾರ್ಮಿಕರ ಹಿತದೃಷ್ಟಿಯಿಂದ ಪರಿಷ್ಕೃತ ಮಸೂದೆ ಮಂಡಿಸಲು ಸರ್ಕಾರ ಮುಂದಾಗಿದೆ.
ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಸಿಗಬೇಕು ಎನ್ನುವುದು ನಮ್ಮ ಸರ್ಕಾರದ ಬದ್ಧತೆಯಾಗಿದೆ. ಹೊರ ರಾಜ್ಯಗಳಿಂದ ಬಂದವರು ಕನ್ನಡ ಕಲಿಯಬೇಕು ಮತ್ತು ಇಲ್ಲಿನ ಸಂಸ್ಕೃತಿಯನ್ನು ಗೌರವಿಸಬೇಕು. ಖಾಸಗಿ ಸಂಸ್ಥೆಗಳು ನಿರ್ವಹಣಾ ವಿಭಾಗದಲ್ಲಿ 50% ಮತ್ತು ನಿರ್ವಹಣೇತರ ವರ್ಗಗಳಲ್ಲಿ 70% ಸ್ಥಳೀಯ ಅಭ್ಯರ್ಥಿಗಳಿಗೆ ಮೀಸಲಾತಿ ನೀಡುವ ಕುರಿತು ಈ ಹಿಂದೆ ಪ್ರಸ್ತಾಪಿಸಲಾಗಿದ್ದು, ಈಗ ಈ ಬಗ್ಗೆ ಅಂತಿಮ ರೂಪುರೇಷೆ ಸಿದ್ಧವಾಗುತ್ತಿದೆ ಎಂದು ತಿಳಿಸಿದ್ದಾರೆ.






