ಕುಮಟಾ: ಪಟ್ಟಣದ ಗಿಬ್ ಸರ್ಕಲ್ ಸಮೀಪವಿರುವ ಖಾದಿಮ್ (Khadim’s) ಚಪ್ಪಲಿ ಮಳಿಗೆಯಲ್ಲಿ ಮಂಗಳವಾರ ತಡರಾತ್ರಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಸ್ವತ್ತು ಬೆಂಕಿಗಾಹುತಿಯಾಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಈ ದುರಂತ ಸಂಭವಿಸಿದೆ ಎಂದು ಶಂಕಿಸಲಾಗಿದೆ.
ರಾತ್ರಿ ವೇಳೆ ಅಂಗಡಿಯೊಳಗೆ ಏಕಾಏಕಿ ದಟ್ಟ ಹೊಗೆ ಮತ್ತು ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆ ಜ್ವಾಲೆ ಇಡೀ ಅಂಗಡಿಯನ್ನು ಆವರಿಸಿಕೊಂಡಿದೆ. ಈ ಆಕಸ್ಮಿಕ ಘಟನೆಯಿಂದಾಗಿ ಅಂಗಡಿಯಲ್ಲಿ ದಾಸ್ತಾನು ಇರಿಸಲಾಗಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಹೊಸ ಚಪ್ಪಲಿಗಳು ಹಾಗೂ ಇತರೆ ಸಾಮಗ್ರಿಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಪ್ರಾಥಮಿಕ ಅಂದಾಜಿನ ಪ್ರಕಾರ, ಈ ದುರ್ಘಟನೆಯಿಂದ ಸುಮಾರು 8 ಲಕ್ಷ ರೂಪಾಯಿಗಳಿಗೂ ಅಧಿಕ ನಷ್ಟ ಸಂಭವಿಸಿದೆ ಎಂದು ತಿಳಿದುಬಂದಿದೆ.
ಬೆಂಕಿಯ ತೀವ್ರತೆ ಹೆಚ್ಚಾಗುತ್ತಿದ್ದಂತೆ ಆತಂಕಗೊಂಡ ಸ್ಥಳೀಯರು ಮತ್ತು ವ್ಯಾಪಾರಸ್ಥರು ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಸತತ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕುಮಟಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.






