ಬೆಳಗಾವಿ: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸುವ ಘಟನೆಯೊಂದು ಕುಂದಾನಗರಿಯಲ್ಲಿ ನಡೆದಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಅವರ ಕಾರು ಚಾಲಕನ ಮೇಲೆ ದುಷ್ಕರ್ಮಿಗಳು ನಡುರಸ್ತೆಯಲ್ಲೇ ಮಾರಣಾಂತಿಕ ಹ*ಲ್ಲೆ ನಡೆಸಿ, ಚಾ*ಕು ಇರಿದು ಪರಾರಿಯಾಗಿದ್ದಾರೆ. ಮಂಗಳವಾರ ಮಧ್ಯಾಹ್ನ ನಗರದ ಜನನಿಬಿಡ ಕ್ಲಬ್ ರಸ್ತೆಯಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ.
ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದ ನಿವಾಸಿ ಬಸವಂತ ಕಡೋಲ್ಕರ್ (32) ಹಲ್ಲೆಗೊಳಗಾದ ಚಾಲಕ. ಬೈಕ್‌ನಲ್ಲಿ ಬಂದ ಇಬ್ಬರು ಮುಸುಕುಧಾರಿಗಳು ಏಕಾಏಕಿ ಬಸವಂತ ಅವರ ಮೇಲೆ ಮುಗಿಬಿದ್ದಿದ್ದು, ಎದೆ, ಭುಜ ಮತ್ತು ತೊಡೆ ಸೇರಿದಂತೆ ನಾಲ್ಕು ಕಡೆಗಳಲ್ಲಿ ಚಾ*ಕುವಿನಿಂದ ಬಲವಾಗಿ ಇರಿದಿದ್ದಾರೆ. ರ*ಕ್ತದ ಮಡುವಿನಲ್ಲಿ ಬಿದ್ದಿದ್ದ ಬಸವಂತ ಅವರನ್ನು ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ವಿಷಯ ತಿಳಿಯುತ್ತಿದ್ದಂತೆಯೇ ಮೃಣಾಲ್ ಹೆಬ್ಬಾಳ್ಕರ್ ಆಸ್ಪತ್ರೆಗೆ ದೌಡಾಯಿಸಿ ಚಾಲಕನ ಆರೋಗ್ಯ ವಿಚಾರಿಸಿದ್ದಾರೆ.
ಐಪಿಎಸ್ ಅಧಿಕಾರಿಯಿಂದ ಪ್ರಾಣ ರಕ್ಷಣೆ:
ಈ ಘಟನೆಯಲ್ಲಿ ಐಪಿಎಸ್ ಅಧಿಕಾರಿ ರವೀಂದ್ರ ಗಡಾದಿ ಅವರು ‘ಆಪತ್ಬಾಂಧವ’ರಾಗಿ ನೆರವಾಗಿದ್ದಾರೆ. ಮಧ್ಯಾಹ್ನ ಊಟಕ್ಕೆ ತೆರಳುತ್ತಿದ್ದ ವೇಳೆ ರಸ್ತೆಯಲ್ಲಿ ಗಲಾಟೆ ನಡೆಯುತ್ತಿರುವುದನ್ನು ಗಮನಿಸಿದ ಅವರು, ತಕ್ಷಣವೇ ಕಾರಿನಿಂದ ಇಳಿದು ಸ್ಥಳಕ್ಕೆ ಧಾವಿಸಿದ್ದಾರೆ. ಇದನ್ನು ಕಂಡ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ರವೀಂದ್ರ ಗಡಾದಿ ಅವರ ಸಮಯಪ್ರಜ್ಞೆಯಿಂದಾಗಿ ಬಸವಂತ ಅವರ ಪ್ರಾಣ ಉಳಿದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗೆ ಜಾಲ ಬೀಸಿದ್ದಾರೆ. ಹಲ್ಲೆಗೆ ನಿಖರ ಕಾರಣವಿನ್ನೂ ಸ್ಪಷ್ಟವಾಗಿಲ್ಲವಾದರೂ, ಗಣಿಗಾರಿಕೆ (ಮೈನಿಂಗ್) ವ್ಯವಹಾರಕ್ಕೆ ಸಂಬಂಧಿಸಿದ ವೈಷಮ್ಯವೇ ಈ ಕೃತ್ಯಕ್ಕೆ ಕಾರಣ ಇರಬಹುದೆಂದು ಶಂಕಿಸಲಾಗಿದೆ.






