ಬೆಂಗಳೂರು: ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಬೃಹತ್ ಪ್ರತಿಭಟನೆಯ ಬಿಸಿ ಸರ್ಕಾರಕ್ಕೆ ತಟ್ಟಿದೆ. ಪ್ರತಿಭಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯದ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ನೇಮಕಾತಿ ವಿಳಂಬದಿಂದಾಗಿ ವಯೋಮಿತಿ ಮೀರುತ್ತಿರುವ ಅಭ್ಯರ್ಥಿಗಳ ಹಿತದೃಷ್ಟಿಯಿಂದ, ಮುಂಬರುವ ನೇಮಕಾತಿಗಳಿಗೆ ಗರಿಷ್ಠ ವಯೋಮಿತಿಯನ್ನು 5 ವರ್ಷ ಸಡಿಲಗೊಳಿಸುವುದಾಗಿ (Age Relaxation) ಮಹತ್ವದ ಘೋಷಣೆ ಮಾಡಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ (X) ನಲ್ಲಿ ಸುದೀರ್ಘ ಪೋಸ್ಟ್ ಹಾಕಿರುವ ಸಿಎಂ, ಯುವಜನರ ಆತಂಕಕ್ಕೆ ಸ್ಪಂದಿಸಿದ್ದು, ಇದೇ ವೇಳೆ ವಿರೋಧ ಪಕ್ಷ ಬಿಜೆಪಿಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ನೇಮಕಾತಿ ಪ್ರಕ್ರಿಯೆಯಲ್ಲಿ ಉಂಟಾದ ವಿಳಂಬದಿಂದಾಗಿ ಅನೇಕ ಅರ್ಹ ಅಭ್ಯರ್ಥಿಗಳು ವಯೋಮಿತಿ ಮೀರುವ ಆತಂಕದಲ್ಲಿದ್ದರು. ಈ ಕಷ್ಟವನ್ನು ಅರಿತು, ಅವರು ಅನ್ಯಾಯಕ್ಕೊಳಗಾಗದಂತೆ ತಡೆಯಲು ಮುಂಬರುವ ನೇಮಕಾತಿಗಳಿಗೆ ಗರಿಷ್ಠ ವಯೋಮಿತಿಯನ್ನು 5 ವರ್ಷಗಳ ಕಾಲ ಸಡಿಲಿಸಲಾಗಿದೆ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.
ಬಿಜೆಪಿ ವಿರುದ್ಧ ಸಿಎಂ ಕೆಂಡಾಮಂಡಲ “ನಾವು ಅಧಿಕಾರಕ್ಕೆ ಬಂದಾಗ 2.64 ಲಕ್ಷ ಹುದ್ದೆಗಳು ಖಾಲಿ ಇದ್ದವು. ಇದು ಒಂದೆರಡು ದಿನಗಳಲ್ಲಿ ಸೃಷ್ಟಿಯಾದದ್ದಲ್ಲ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ (2019-2023) ನಡೆದ ನೇಮಕಾತಿ ಅಕ್ರಮಗಳು, ಭ್ರಷ್ಟಾಚಾರ ಮತ್ತು ಸಕಾಲದಲ್ಲಿ ನೇಮಕಾತಿ ಮಾಡದಿರುವುದೇ ಇಂದಿನ ಈ ದುಸ್ಥಿತಿಗೆ ಕಾರಣ,” ಎಂದು ಸಿಎಂ ಆರೋಪಿಸಿದ್ದಾರೆ. ವಿರೋಧ ಪಕ್ಷದ ನಾಯಕರು ತಮ್ಮ ರಾಜಕೀಯ ಲಾಭಕ್ಕಾಗಿ ನಿರಪರಾಧಿ ವಿದ್ಯಾರ್ಥಿಗಳಿಗೆ ತಪ್ಪು ಮಾರ್ಗದರ್ಶನ ನೀಡಿ, ಅಶಾಂತಿ ಮೂಡಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ವಿಳಂಬಕ್ಕೆ ಕಾರಣವೇನು? ಒಳ ಮೀಸಲಾತಿಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಪ್ರಕರಣಗಳು ನಡೆಯುತ್ತಿದ್ದ ಕಾರಣ, ಕಾನೂನು ತೊಡಕು ಉಂಟಾಗಬಾರದು ಎಂಬ ಉದ್ದೇಶದಿಂದ ಹಲವು ನೇಮಕಾತಿಗಳನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿತ್ತು. ನಾವು ಸಂವಿಧಾನ ಮತ್ತು ಸಾಮಾಜಿಕ ನ್ಯಾಯಕ್ಕೆ ಬದ್ಧರಾಗಿರುವುದರಿಂದ ತ್ವರಿತ ನಿರ್ಧಾರ ಕೈಗೊಳ್ಳಲು ಸಾಧ್ಯವಾಗಿರಲಿಲ್ಲ ಎಂದು ಸಿಎಂ ಸಮರ್ಥಿಸಿಕೊಂಡಿದ್ದಾರೆ.
ಕಳೆದ ಎರಡೂವರೆ ವರ್ಷಗಳಲ್ಲಿ ನಮ್ಮ ಸರ್ಕಾರ ವಿವಿಧ ಇಲಾಖೆಗಳಲ್ಲಿ 40,000ಕ್ಕೂ ಹೆಚ್ಚು ನೇಮಕಾತಿಗಳನ್ನು ನಡೆಸಿದೆ. ಉಳಿದ ಖಾಲಿ ಹುದ್ದೆಗಳನ್ನು ಪಾರದರ್ಶಕವಾಗಿ ಮತ್ತು ಕಾಲಮಿತಿಯೊಳಗೆ ಭರ್ತಿ ಮಾಡಲಾಗುವುದು. ಯುವಜನರು ವಿಪಕ್ಷಗಳ ಮಾತು ಕೇಳಿ ಹಾದಿತಪ್ಪಬಾರದು, ನಿಮ್ಮ ಶಿಕ್ಷಣ ಮತ್ತು ಕೌಶಲ್ಯದ ಮೇಲೆ ಭರವಸೆ ಇಡಿ, ಸರ್ಕಾರ ನಿಮ್ಮೊಂದಿಗಿದೆ ಎಂದು ಸಿದ್ದರಾಮಯ್ಯ ಅಭಯ ನೀಡಿದ್ದಾರೆ.






