ಗ್ರೇಟರ್ ನೋಯ್ಡಾದ ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಗುರುವಾರ ಮುಂಜಾನೆ ಚಲಿಸುತ್ತಿದ್ದ ಸ್ಲೀಪರ್ ಬಸ್‌ವೊಂದರಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು 9 ಮಂದಿ ಸಜೀವ ದಹನವಾಗಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿರುವ ಭೀಕರ ಘಟನೆ ನಡೆದಿದೆ.
ದೆಹಲಿಯಿಂದ ಬಿಹಾರಕ್ಕೆ ತೆರಳುತ್ತಿದ್ದ ಈ ಬಸ್ ಜೆವಾರ್ ಪೊಲೀಸ್ ಠಾಣಾ ವ್ಯಾಪ್ತಿಯ 33ನೇ ಕಿಲೋಮೀಟರ್ ಮೈಲಿಗಲ್ಲು ಬಳಿ ತಲುಪುತ್ತಿದ್ದಂತೆ ಈ ಭೀಕರ ದುರಂತ ಸಂಭವಿಸಿದೆ. ಬೆಂಕಿಯ ತೀವ್ರತೆಗೆ ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಘಟನೆಯಲ್ಲಿ 9 ಮಂದಿ ಮೃ*ತಪಟ್ಟಿರುವುದನ್ನು ಗೌತಮ್ ಬುದ್ಧ ನಗರ ಪೊಲೀಸ್ ವಕ್ತಾರರು ಖಚಿತಪಡಿಸಿದ್ದಾರೆ ಎಂದು ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.
ಬೆಂಕಿ ಕಾಣಿಸಿಕೊಂಡ ತಕ್ಷಣ ಬಸ್‌ನೊಳಗೆ ದಟ್ಟ ಹೊಗೆ ಆವರಿಸಿದ್ದರಿಂದ ಪ್ರಯಾಣಿಕರು ತೀವ್ರ ಆತಂಕಕ್ಕೆ ಒಳಗಾಗಿದ್ದರು. ದುರಂತದಿಂದ ಸ್ವಲ್ಪದರಲ್ಲೇ ಪಾರಾದ ಪ್ರಯಾಣಿಕರೊಬ್ಬರು ಎಎನ್‌ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿ ಆ ಭಯಾನಕ ಕ್ಷಣಗಳನ್ನು ಬಿಚ್ಚಿಟ್ಟಿದ್ದಾರೆ.
ಘಟನೆ ನಡೆದಾಗ ತಾವು ಗಾಢ ನಿದ್ರೆಯಲ್ಲಿದ್ದೆವು ಮತ್ತು ಬಸ್‌ಗೆ ಬೆಂಕಿ ಹೊತ್ತಿಕೊಂಡಿರುವುದನ್ನು ಕಂಡು ಯಾರೋ ತಮ್ಮನ್ನು ಎಚ್ಚರಿಸಿದರು ಎಂದಿದ್ದಾರೆ. ಬಸ್‌ನ ಮುಂಭಾಗದಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣವೇ ಎಲ್ಲೆಡೆ ದಟ್ಟ ಹೊಗೆ ಆವರಿಸಿತು ಮತ್ತು ತಾವು ಹೇಗೋ ಕಷ್ಟಪಟ್ಟು ಬಸ್‌ನಿಂದ ಕೆಳಗಿಳಿದು ಪ್ರಾಣಾಪಾಯದಿಂದ ಪಾರಾಗಿದ್ದಾಗಿ ಅವರು ವಿವರಿಸಿದ್ದಾರೆ.
ಈ ಭೀಕರ ಬಸ್ ದುರಂತದ ಕುರಿತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತೀವ್ರ ದಿಗ್ಭ್ರಮೆ ವ್ಯಕ್ತಪಡಿಸಿದ್ದು, ಅಗ್ನಿಗಾಹುತಿಯಾದ ಮೃತರ ಕುಟುಂಬಗಳಿಗೆ ತೀವ್ರ ಸಂತಾಪ ಸೂಚಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡವರಿಗೆ ತಕ್ಷಣವೇ ಅತ್ಯುತ್ತಮ ವೈದ್ಯಕೀಯ ಚಿಕಿತ್ಸೆ ಒದಗಿಸುವಂತೆ ಮತ್ತು ಮೃತರ ಕುಟುಂಬಸ್ಥರನ್ನು ಸಂಪರ್ಕಿಸಿ ಅವರಿಗೆ ಸಾಧ್ಯವಿರುವ ಎಲ್ಲಾ ರೀತಿಯ ನೆರವು ಹಾಗೂ ಪರಿಹಾರವನ್ನು ಒದಗಿಸುವಂತೆ ಸಂಬಂಧಪಟ್ಟ ಉನ್ನತಾಧಿಕಾರಿಗಳಿಗೆ ಅವರು ನಿರ್ದೇಶನ ನೀಡಿದ್ದಾರೆ. ಇದೇ ವೇಳೆ, ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಮುಖ್ಯಮಂತ್ರಿಗಳು ಪ್ರಾರ್ಥಿಸಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
