ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ ಬೆಳ್ಳಂಬೆಳಿಗ್ಗೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಶಾಂತಿನಗರ ಬಸ್ ನಿಲ್ದಾಣದ ಬಳಿ ಈ ದುರ್ಘಟನೆ ಸಂಭವಿಸಿದೆ.
ಇಂದು ಬೆಳಿಗ್ಗೆ ಸುಮಾರು 7 ಗಂಟೆಗೆ ರಿಚ್ಮಂಡ್ ಸರ್ಕಲ್ ಕಡೆಯಿಂದ ಅತಿ ವೇಗವಾಗಿ ಬಂದ ಆಂಬುಲೆನ್ಸ್, ರೆಡ್ ಸಿಗ್ನಲ್ ಕಾರಣಕ್ಕೆ ನಿಂತಿದ್ದ ಎರಡು ಬೈಕ್‌ಗಳಿಗೆ ಹಿಂಬದಿಯಿಂದ ಭಾರಿ ವೇಗದಲ್ಲಿ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಆಂಬುಲೆನ್ಸ್ ಸುಮಾರು 50 ಮೀಟರ್‌ಗಳಷ್ಟು ದೂರದವರೆಗೆ ಬೈಕ್‌ಗಳನ್ನು ಎಳೆದೊಯ್ದು, ಕೊನೆಗೆ ಪೊಲೀಸ್ ಚೌಕಿಗೂ ಗುದ್ದಿದೆ.
ಬೈಕ್‌ನಲ್ಲಿದ್ದ ಇಸ್ಮಾಯಿಲ್ ಮತ್ತು ಓರ್ವ ಮಹಿಳೆ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಗಾಯಗೊಂಡಿರುವ ಸಿದ್ದಿಕಿ ಸೇರಿದಂತೆ ಇಬ್ಬರನ್ನು ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.
ಘಟನೆಗೆ ಆಂಬುಲೆನ್ಸ್ ಚಾಲಕನ ಅತಿವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯೇ ಕಾರಣ ಎಂದು ಹೇಳಲಾಗಿದೆ. ಅಪಘಾತ ಸಂಭವಿಸಿದ ಕೂಡಲೇ ಆಂಬುಲೆನ್ಸ್ ಚಾಲಕ ವಾಹನವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ.
ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಚಾಲಕನ ಪತ್ತೆಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ. ಈ ಕುರಿತು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
