ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣರಾಜಸಾಗರ (ಕೆಆರ್‌ಎಸ್) ಅಣೆಕಟ್ಟಿಗೆ ಇಂದು ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಮುಖಂಡರು ಹಾಗೂ ಕಾರ್ಯಕರ್ತರು ಮುತ್ತಿಗೆ ಹಾಕಲು ಮುಂದಾಗಿರುವ ಹಿನ್ನೆಲೆಯಲ್ಲಿ, ಡ್ಯಾಂ ಹಾಗೂ ಸುತ್ತಮುತ್ತಲಿನ ಸೂಕ್ಷ್ಮ ಪ್ರದೇಶಗಳಲ್ಲಿ ಬೃಹತ್ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಪೊಲೀಸ್ ಇಲಾಖೆ ಸಂಪೂರ್ಣ ಅಲರ್ಟ್ ಆಗಿದ್ದು, ಕೆಆರ್‌ಎಸ್ ಆವರಣಕ್ಕೆ ಬಿಗಿ ಭದ್ರತೆಯ ಕೋಟೆ ನಿರ್ಮಿಸಲಾಗಿದೆ.
ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಡಾ. ವಿ.ಜೆ. ಶೋಭಾರಾಣಿ ಅವರ ನೇತೃತ್ವದಲ್ಲಿ ವ್ಯಾಪಕ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ಭದ್ರತೆಗಾಗಿ ಇಬ್ಬರು ಎಸ್‌ಪಿ ಮಟ್ಟದ ಅಧಿಕಾರಿಗಳು, 9 ಮಂದಿ ಡಿವೈಎಸ್‌ಪಿ, 27 ಪೊಲೀಸ್ ಇನ್ಸ್‌ಪೆಕ್ಟರ್‌ಗಳು, 45 ಸಬ್ ಇನ್ಸ್‌ಪೆಕ್ಟರ್‌ಗಳು (ಪಿಎಸ್‌ಐ), 78 ಎಎಸ್‌ಐಗಳು ಸೇರಿದಂತೆ ಒಟ್ಟು ಒಂದೂವರೆ ಸಾವಿರಕ್ಕೂ ಹೆಚ್ಚು (1,500) ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇಡೀ ಪ್ರದೇಶದಲ್ಲಿ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದು, ಪರಿಸ್ಥಿತಿಯನ್ನು ನಿಯಂತ್ರಣದಲ್ಲಿಡಲು ಸಜ್ಜಾಗಿದ್ದಾರೆ.
ಬಿಜೆಪಿಯ ಪ್ರತಿಭಟನೆ ಹಾಗೂ ಮುತ್ತಿಗೆ ಕಾರ್ಯಕ್ರಮದಿಂದ ದೂರದ ಊರುಗಳಿಂದ ಬರುವ ಪ್ರವಾಸಿಗರಿಗೆ ಯಾವುದೇ ರೀತಿಯ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಮುಂಜಾಗ್ರತಾ ಕ್ರಮವನ್ನು ಕೈಗೊಳ್ಳಲಾಗಿದೆ. ಕೆಆರ್‌ಎಸ್‌ನಲ್ಲಿರುವ ಐತಿಹಾಸಿಕ ‘ಬೃಂದಾವನ ಗಾರ್ಡನ್ಸ್’ಗೆ ಪ್ರವಾಸಿಗರ ಪ್ರವೇಶವನ್ನು ಇಂದು ಒಂದು ದಿನದ ಮಟ್ಟಿಗೆ ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಇಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಈ ನಿರ್ಬಂಧ ಜಾರಿಯಲ್ಲಿರಲಿದ್ದು, ಈ ಕುರಿತು ಶ್ರೀರಂಗಪಟ್ಟಣ ತಹಸೀಲ್ದಾರ್ ಚೇತನಾ ಯಾದವ್ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ.
