ಲಕ್ನೋ: ಉತ್ತರ ಪ್ರದೇಶದ ಲಕ್ನೋದ ಅಲಿಗಂಜ್ (Aliganj) ಪ್ರದೇಶದ ಕಟ್ಟಡವೊಂದರಲ್ಲಿ ಭಾರಿ ಬೆಂಕಿ ಅವಘಡ (Massive Fire Outbreak) ಸಂಭವಿಸಿದೆ. ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ತರಬೇತಿ ಕೇಂದ್ರವೊಂದು (Coaching Centre) ಬೆಂಕಿಯ ಕೆನ್ನಾಲಿಗೆಗೆ ಧಗಧಗನೆ ಹೊತ್ತಿ ಉರಿದಿದ್ದು, ದಟ್ಟವಾದ ಹೊಗೆ ಇಡೀ ಪ್ರದೇಶವನ್ನು ಆವರಿಸಿಕೊಂಡಿದೆ.
ಅಗ್ನಿ ಅವಘಡಕ್ಕೆ ತುತ್ತಾದ ಕಟ್ಟಡದ ನೆಲಮಹಡಿಯಲ್ಲಿ ಸಾಕುಪ್ರಾಣಿಗಳ ಅಂಗಡಿ (Pet Shop) ಇತ್ತು ಎನ್ನಲಾಗಿದೆ. ಇನ್ನು ಮೇಲಿನ ಮಹಡಿಯಲ್ಲಿ ಗೇಮಿಂಗ್ ವಲಯವಿದ್ದು (Gaming Zone), ಅಲ್ಲಿ ಉದ್ಯೋಗಿಗಳು ಗೇಮಿಂಗ್ ಸಾಫ್ಟ್‌ವೇರ್‌ನಲ್ಲಿ ಕೆಲಸ ಮಾಡುತ್ತಿದ್ದರು. ಇದೇ ಕಟ್ಟಡದ ಪೂರ್ಣಿಯಾ (Puraniya) ಪ್ರದೇಶದ ಭಾಗದಲ್ಲಿ ತರಬೇತಿ ಕೇಂದ್ರವೂ ಕಾರ್ಯನಿರ್ವಹಿಸುತ್ತಿತ್ತು. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ವಿದ್ಯಾರ್ಥಿಗಳು ಅವಘಡದಿಂದ ಪಾರಾಗಲು ಕಟ್ಟಡದ ಮೇಲಿಂದ ಜಿಗಿಯುತ್ತಿರುವ ಮೈನಡುಗಿಸುವ ದೃಶ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಘಟನೆ ಸಂಭವಿಸುತ್ತಿದ್ದಂತೆ ತುರ್ತು ರಕ್ಷಣಾ ತಂಡ ಹಾಗೂ ಅಗ್ನಿಶಾಮಕ ದಳದ (Fire Brigade) ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ. ಸದ್ಯಕ್ಕೆ ಲಭ್ಯವಿರುವ ಮಾಹಿತಿ ಪ್ರಕಾರ, ತರಬೇತಿ ಕೇಂದ್ರದಲ್ಲಿದ್ದ ಎಲ್ಲಾ ಮಕ್ಕಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ (Safe Rescue).
ಘಟನೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (CM Yogi Adityanath), ತಕ್ಷಣವೇ ಸ್ಥಳಕ್ಕೆ ತಲುಪಿ ಪರಿಹಾರ ಕಾರ್ಯಗಳನ್ನು ತ್ವರಿತಗೊಳಿಸುವಂತೆ ಹಿರಿಯ ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ಗಾಯಗೊಂಡವರಿಗೆ ತಕ್ಷಣವೇ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದ್ದಾರೆ. ಶಾರ್ಟ್ ಸರ್ಕ್ಯೂಟ್ ಅಥವಾ ಬೇರೆ ಯಾವ ಕಾರಣದಿಂದ ಬೆಂಕಿ ಹೊತ್ತಿಕೊಂಡಿದೆ ಎಂಬುದು ಇನ್ನಷ್ಟೇ ತಿಳಿಯಬೇಕಿದೆ.
