S Shorts

Dharmasthala ಸೌಜನ್ಯ ಕೊಲೆ ಪ್ರಕರಣ: ತನಿಖಾ ಲೋಪವೆಸಗಿದ ಅಧಿಕಾರಿಗಳ ವಿರುದ್ಧ ಕ್ರಮ? – ಸಿಬಿಐಗೆ ಹೈಕೋರ್ಟ್ ನೋಟಿಸ್!

Dharmasthala ಸೌಜನ್ಯ ಕೊಲೆ ಪ್ರಕರಣ: ತನಿಖಾ ಲೋಪವೆಸಗಿದ ಅಧಿಕಾರಿಗಳ ವಿರುದ್ಧ ಕ್ರಮ? – ಸಿಬಿಐಗೆ ಹೈಕೋರ್ಟ್ ನೋಟಿಸ್!
Author: Sagaradventure
Posted By: Sagaradventure
Updated: Feb 8, 2026 | 2:36 PM

ಮಂಗಳೂರು: ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಧರ್ಮಸ್ಥಳದ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಾಗಿದೆ. ದೋಷಪೂರಿತ ತನಿಖೆ ನಡೆಸಿ ಕರ್ತವ್ಯ ಲೋಪವೆಸಗಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸೌಜನ್ಯಾ ತಾಯಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಕೇಂದ್ರೀಯ ತನಿಖಾ ದಳ (CBI) ಸೇರಿದಂತೆ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದೆ.

ಸಿಬಿಐ ವಿಶೇಷ ನ್ಯಾಯಾಲಯವು 2023ರ ಜೂನ್ 16ರಂದು ನೀಡಿದ್ದ ತೀರ್ಪಿನಲ್ಲಿ, “ತನಿಖೆಯಲ್ಲಿ ಲೋಪ ಎಸಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಈ ಪ್ರಕರಣವನ್ನು ಇಲಾಖಾ ತನಿಖೆ ಅಥವಾ ಖುಲಾಸೆ ಸಮಿತಿಯ ಮುಂದೆ ಇಡಬೇಕು” ಎಂದು ನಿರ್ದೇಶನ ನೀಡಿತ್ತು. ಆದರೆ, ಈ ಆದೇಶವನ್ನು ಪಾಲನೆ ಮಾಡದ ಹಿನ್ನೆಲೆಯಲ್ಲಿ ಸೌಜನ್ಯಾ ಅವರ ತಾಯಿ ಕುಸುಮವತಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು.
ನ್ಯಾಯಮೂರ್ತಿ ಬಿ.ಎಂ. ಶ್ಯಾಮ್ ಪ್ರಸಾದ್ ಅವರಿದ್ದ ಏಕಸದಸ್ಯ ಪೀಠವು ಈ ಅರ್ಜಿಯನ್ನು ವಿಚಾರಣೆ ನಡೆಸಿ, ಸಿಬಿಐ ವಿಶೇಷ ನ್ಯಾಯಾಲಯದ ನಿರ್ದೇಶನವನ್ನು ಅನುಷ್ಠಾನಗೊಳಿಸುವ ಬಗ್ಗೆ ವಿವರಣೆ ನೀಡುವಂತೆ ಸಿಬಿಐಗೆ ನೋಟಿಸ್ ನೀಡಿದೆ.

ಹಿನ್ನೆಲೆ ಏನು?

2012ರಲ್ಲಿ ನಡೆದಿದ್ದ ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದಲ್ಲಿ ಸಂತೋಷ್ ರಾವ್ ಎಂಬುವವರನ್ನು ಆರೋಪಿ ಎಂದು ಬಂಧಿಸಲಾಗಿತ್ತು. ಆದರೆ, 11 ವರ್ಷಗಳ ಸುದೀರ್ಘ ವಿಚಾರಣೆಯ ನಂತರ ಸಾಕ್ಷ್ಯಾಧಾರಗಳ ಕೊರತೆಯಿಂದ ಸಿಬಿಐ ವಿಶೇಷ ನ್ಯಾಯಾಲಯ ಸಂತೋಷ್ ರಾವ್ ಅವರನ್ನು ದೋಷಮುಕ್ತಗೊಳಿಸಿತ್ತು. ಅಷ್ಟೇ ಅಲ್ಲದೆ, ತನಿಖಾ ಹಂತದಲ್ಲಿ ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧ ಕಿಡಿಕಾರಿತ್ತು. ಈಗ ಹೈಕೋರ್ಟ್ ಮಧ್ಯಪ್ರವೇಶದಿಂದ ಪ್ರಕರಣದ ತನಿಖಾಧಿಕಾರಿಗಳಿಗೆ ಸಂಕಷ್ಟ ಎದುರಾಗುವ ಸಾಧ್ಯತೆಯಿದೆ.