ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿಗಳಿಂದ ಉಂಟಾಗುವ ವಾಯುಮಾಲಿನ್ಯ ಮತ್ತು ಶಬ್ದಮಾಲಿನ್ಯವನ್ನು ನಿಯಂತ್ರಿಸುವ ಉದ್ದೇಶದಿಂದ, ಸುಪ್ರೀಂಕೋರ್ಟ್ ಮಾರ್ಗಸೂಚಿಯಂತೆ ಪಟಾಕಿ ಸಿಡಿಸಲು ರಾತ್ರಿ 8ರಿಂದ 10 ಗಂಟೆಯವರೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ನಿಗದಿತ ಸಮಯವನ್ನು ಮೀರಿ ಪಟಾಕಿ ಸಿಡಿಸುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಪರಿಸರ ಸಚಿವ ರಾಮಲಿಂಗ ರೆಡ್ಡಿ ಎಚ್ಚರಿಕೆ ನೀಡಿದ್ದಾರೆ.
ನ್ಯಾಯಾಲಯದ ಆದೇಶ ಪಾಲನೆಗೆ ಖಡಕ್ ಸೂಚನೆ:
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ಆದೇಶಗಳ ಅನ್ವಯ ಪಟಾಕಿ ಬಳಕೆಗೆ ಮಾರ್ಗಸೂಚಿಗಳನ್ನು ರೂಪಿಸಲಾಗಿದೆ. ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ನ್ಯಾಯಾಲಯದ ಈ ಆದೇಶಗಳನ್ನು ಚಾಚೂತಪ್ಪದೆ ಪಾಲಿಸಬೇಕು ಎಂದು ನಿರ್ದೇಶನ ನೀಡಲಾಗಿದೆ ಎಂದರು.
ಇದರ ಜೊತೆಗೆ, ಹಬ್ಬದ ವೇಳೆ ಯಾವುದೇ ಅನಾಹುತಗಳು ಸಂಭವಿಸದಂತೆ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಪಟಾಕಿ ಗೋದಾಮುಗಳನ್ನು ಕಟ್ಟುನಿಟ್ಟಾಗಿ ಪರಿಶೀಲನೆ ಮಾಡಬೇಕೆಂದೂ ಜಿಲ್ಲಾಧಿಕಾರಿಗಳಿಗೆ ಸಚಿವರು ಇದೇ ವೇಳೆ ಖಡಕ್ ಸೂಚನೆ ನೀಡಿದ್ದಾರೆ.
