S Shorts

ಸೆ.14ರಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ಸಂಪೂರ್ಣ ನಿಷೇಧ: GBA ಕೊಟ್ಟ ಸೂಚನೆ ಏನೇನು?

ಸೆ.14ರಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ಸಂಪೂರ್ಣ ನಿಷೇಧ: GBA ಕೊಟ್ಟ ಸೂಚನೆ ಏನೇನು?
Author: Sagaradventure
Posted By: Sagaradventure
Updated: Sep 12, 2026 | 10:18 AM

ಸೆಪ್ಟೆಂಬರ್ 14 ರಂದು (ಸೋಮವಾರ) ನಡೆಯಲಿರುವ ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ರಾಜಧಾನಿ ಬೆಂಗಳೂರಿನಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಆದೇಶ ಹೊರಡಿಸಿದೆ. 

ಪ್ರಾಧಿಕಾರದ ಪಶುಪಾಲನೆ ವಿಭಾಗದ ಉಪ ನಿರ್ದೇಶಕರು ಈ ಕುರಿತು ಅಧಿಕೃತ ಸುತ್ತೋಲೆ ಪ್ರಕಟಿಸಿದ್ದು, ಜಿಬಿಎ ವ್ಯಾಪ್ತಿಯ ಎಲ್ಲಾ ಕಸಾಯಿಖಾನೆಗಳಲ್ಲಿ ಪ್ರಾಣಿವಧೆ ಹಾಗೂ ಮಾಂಸದ ಮಳಿಗೆಗಳಲ್ಲಿ ಮಾರಾಟ ಮಾಡುವುದನ್ನು ಕಡ್ಡಾಯವಾಗಿ ನಿರ್ಬಂಧಿಸಲಾಗಿದೆ. ಹಬ್ಬದ ದಿನದಂದು ಸಾರ್ವಜನಿಕರು ಹಾಗೂ ವ್ಯಾಪಾರಿಗಳು ಈ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು. ಆದೇಶ ಉಲ್ಲಂಘಿಸಿ ಅಕ್ರಮವಾಗಿ ಪ್ರಾಣಿವಧೆ ಅಥವಾ ಮಾಂಸ ಮಾರಾಟ ಮಾಡಿದ್ದು ಕಂಡುಬಂದರೆ ಸಂಬಂಧಪಟ್ಟವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಪರಿಸರ ಸ್ನೇಹಿ ಗಣೇಶ ವಿಸರ್ಜನೆಗೆ ಸಿದ್ಧತೆ:

ಪರಿಸರ ಸ್ನೇಹಿ ಹಬ್ಬದ ಆಚರಣೆಗೆ ಒತ್ತು ನೀಡಿರುವ ಜಿಬಿಎ, ಹಲಸೂರು ಕೆರೆಯ ಕಲ್ಯಾಣಿಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ವ್ಯಾಪಕ ಸಿದ್ಧತೆ ಮಾಡಿಕೊಂಡಿದೆ. ಇಲ್ಲಿ ಕೇವಲ ಪರಿಸರ ಸ್ನೇಹಿ ಮಣ್ಣಿನ ಮೂರ್ತಿಗಳ ವಿಸರ್ಜನೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು, ಪಿಒಪಿ (POP – Plaster of Paris) ಮೂರ್ತಿಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಸಾರ್ವಜನಿಕರ ಸುರಕ್ಷತೆ ಮತ್ತು ಅನುಕೂಲಕ್ಕಾಗಿ ಸ್ಥಳದಲ್ಲಿ ಸಿಸಿಟಿವಿ ಕ್ಯಾಮೆರಾಗಳ ಕಣ್ಗಾವಲು, 24 ಗಂಟೆಗಳ ಕ್ರೇನ್ ಸೇವೆ, ಆಂಬುಲೆನ್ಸ್, ನಿರಂತರ ವಿದ್ಯುತ್ ದೀಪದ ವ್ಯವಸ್ಥೆ, ಕುಡಿಯುವ ನೀರು ಹಾಗೂ ಸುಗಮ ಸಂಚಾರ ನಿರ್ವಹಣೆಗೆ ವ್ಯವಸ್ಥೆ ಮಾಡಲಾಗಿದೆ.

ಗಣೇಶ ವಿಸರ್ಜನೆಗೆ ಸೆಪ್ಟೆಂಬರ್ 14, 16, 18, 20, 22, 24, 26, 27 ಮತ್ತು 28 ರಂದು ಮಾತ್ರ ಅವಕಾಶ ನೀಡಲಾಗಿದೆ. ಕಲ್ಯಾಣಿಯ ಶುಚಿತ್ವ ಕಾಪಾಡುವ ಹಾಗೂ ಶುಚಿಗೊಳಿಸುವ ನಿಟ್ಟಿನಲ್ಲಿ ಸೆಪ್ಟೆಂಬರ್ 15, 17, 19, 21, 23 ಹಾಗೂ 25 ರಂದು ವಿಸರ್ಜನಾ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುವುದು ಎಂದು ಜಿಬಿಎ ಆಯುಕ್ತ ಜಗದೀಶ್ ಜಿ. ಮಾಹಿತಿ ನೀಡಿದ್ದಾರೆ.