ಚಾಮರಾಜನಗರ: 2021ರ ಕೋವಿಡ್ ಎರಡನೇ ಅಲೆಯ ಸಂದರ್ಭ ಆಕ್ಸಿಜನ್ ಕೊರತೆಯಿಂದ ಪ್ರಾಣ ಕಳೆದುಕೊಂಡಿದ್ದವರ ಕುಟುಂಬಗಳ ಸದಸ್ಯರಿಗೆ ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರಿ ನೀಡಲಾಗಿದ್ದು, ನೇಮಕಾತಿ ಪತ್ರ ವಿತರಿಸಲಾಗಿದೆ. ಈ ಹಿಂದೆ ನೀಡಿದ್ದ ಭರವಸೆಯನ್ನು ಆ ಮೂಲಕ ಕಾಂಗ್ರೆಸ್ ಈಡೇರಿಸಿದೆ.
ಗುಂಡ್ಲುಪೇಟೆಯ ದೇವರಾಜ್ ಅರಸ್ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ 25 ಮಂದಿಗೆ ಸರ್ಕಾರಿ ಉದ್ಯೋಗದ ನೇಮಕಾತಿ ಪತ್ರ ವಿತರಣೆ ಮಾಡಿದ್ದಾರೆ. ಸಂತ್ರಸ್ತ ಕುಟುಂಬಗಳ 25 ಮಂದಿಗೆ ಚಾಮರಾಜನಗರ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಖಾಯಂ ನೌಕರಿಯನ್ನು ರಾಜ್ಯ ಸರ್ಕಾರ ನೀಡಿದೆ.
ಕೋವಿಡ್ ಎರಡನೇ ಅಲೆಯ ವೇಳೆ ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆಯಿಂದಾಗಿ ಒಟ್ಟು 36 ಮಂದಿ ಪ್ರಾಣಕಳೆದುಕೊಂಡಿದ್ದರು. ಈ ಪೈಕಿ 21 ಸಂತ್ರಸ್ತ ಕುಟುಂಬಗಳು ಸರ್ಕಾರಿ ಉದ್ಯೋಗಕ್ಕೆ ಬೇಡಿಕೆ ಇಟ್ಟಿದ್ದರು. ಹೀಗಾಗಿ ಮೃತಪಟ್ಟ ಕುಟುಂಬದವರಿಗೆ ಸರ್ಕಾರಿ ನೌಕರಿ ಭರವಸೆಯನ್ನುವಿರೋಧ ಪಕ್ಷದಲ್ಲಿದ್ದಾಗ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ನೀಡಿದ್ದರು.
ಭಾರತ್ ಜೋಡೋ ಯಾತ್ರೆ ವೇಳೆ ಸಂತ್ರಸ್ತ ಕುಟುಂಬಗಳ ಸದಸ್ಯರಿಗೆ ಸರ್ಕಾರಿ ಉದ್ಯೋಗದ ನೀಡುವ ಭರವಸೆಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿದ್ದರು.
