ಮುಂಬರುವ ಕರ್ನಾಟಕ ವಿಧಾನಸಭಾ ಉಪಚುನಾವಣೆಗೆ ಸಂಬಂಧಿಸಿದಂತೆ ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ತನ್ನ ಅಧಿಕೃತ ಅಭ್ಯರ್ಥಿಗಳ ಪಟ್ಟಿಯನ್ನು ಭಾನುವಾರ (ಮಾರ್ಚ್ 22) ಬಿಡುಗಡೆ ಮಾಡಿದೆ. ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅನುಮೋದನೆಯ ಮೇರೆಗೆ ರಾಜ್ಯದ ಎರಡು ಪ್ರಮುಖ ವಿಧಾನಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಿ ಅಧಿಕೃತ ಘೋಷಣೆ ಮಾಡಲಾಗಿದೆ.
ತೀವ್ರ ಕುತೂಹಲ ಹಾಗೂ ಭಿನ್ನಮತಕ್ಕೆ ಕಾರಣವಾಗಿದ್ದ 107-ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿಯಾಗಿ ಸಮರ್ಥ್ ಮಲ್ಲಿಕಾರ್ಜುನ್ ಅವರಿಗೆ ಟಿಕೆಟ್ ಒಲಿದುಬಂದಿದೆ. ಇದರೊಂದಿಗೆ ಇನ್ನುಳಿದ 24-ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣಕ್ಕೆ ಉಮೇಶ್ ಮೇಟಿ ಅವರನ್ನು ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ.
ಈ ಕುರಿತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಪತ್ರಿಕಾ ಪ್ರಕಟಣೆ ಹೊರಡಿಸಿ ಅಭ್ಯರ್ಥಿಗಳ ಹೆಸರನ್ನು ಖಚಿತಪಡಿಸಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆ ವಿಚಾರವಾಗಿ ಅಲ್ಪಸಂಖ್ಯಾತ ನಾಯಕರ ತೀವ್ರ ವಿರೋಧ ಹಾಗೂ ಅಸಮಾಧಾನಗಳ ನಡುವೆಯೂ, ಮುನ್ನವೇ ನಾಮಪತ್ರ ಸಲ್ಲಿಸಿದ್ದ ಸಮರ್ಥ್ ಮಲ್ಲಿಕಾರ್ಜುನ್ ಅವರಿಗೆ ಹೈಕಮಾಂಡ್ ಮಣೆ ಹಾಕಿದ್ದು, ಈ ಮೂಲಕ ಬೈಎಲೆಕ್ಷನ್ ಕಣ ಮತ್ತಷ್ಟು ರಂಗೇರುವ ಮುನ್ಸೂಚನೆ ಸಿಕ್ಕಿದೆ.
