S Shorts

ರಾಜ್ಯಕ್ಕೆ ಮತ್ತೆ Corona ಆತಂಕ: ಹತ್ತು ದಿನಗಳಲ್ಲಿ ಪ್ರಕರಣಗಳ ಸಂಖ್ಯೆ 32ಕ್ಕೆ ಏರಿಕೆ, ಹೈ ಅಲರ್ಟ್!

ರಾಜ್ಯಕ್ಕೆ ಮತ್ತೆ Corona ಆತಂಕ: ಹತ್ತು ದಿನಗಳಲ್ಲಿ ಪ್ರಕರಣಗಳ ಸಂಖ್ಯೆ 32ಕ್ಕೆ ಏರಿಕೆ, ಹೈ ಅಲರ್ಟ್!
Author: Sagaradventure
Posted By: Sagaradventure
Updated: Jul 17, 2026 | 10:50 AM

ಬೆಂಗಳೂರು: ದೇಶದಲ್ಲಿ ಕೊರೋನಾ ಮಹಾಮಾರಿ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಿದೆ ಎನ್ನುವಷ್ಟರಲ್ಲೇ ರಾಜ್ಯಕ್ಕೆ ಮತ್ತೆ ಕೋವಿಡ್ ಭೀತಿ ಎದುರಾಗಿದೆ. ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಕೊರೋನಾ ಸೋಂಕು ಪ್ರಕರಣಗಳ ಸಂಖ್ಯೆಯಲ್ಲಿ ದಿಢೀರ್ ಏರಿಕೆ ಕಂಡುಬಂದಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಜೂನ್ ತಿಂಗಳಿನಲ್ಲಿ ಕೇವಲ 14 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಆದರೆ, ಕೇವಲ ಹತ್ತು ದಿನಗಳ ಅಂತರದಲ್ಲೇ ಈ ಸಂಖ್ಯೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಸದ್ಯ ರಾಜ್ಯದಲ್ಲಿ 32ಕ್ಕೂ ಅಧಿಕ ಜನರಿಗೆ ಕೊರೋನಾ ಪಾಸಿಟಿವ್ ಇರುವುದು ದೃಢಪಟ್ಟಿದೆ.

ಆರೋಗ್ಯ ಇಲಾಖೆಯು ಇತ್ತೀಚೆಗೆ ಒಟ್ಟು 193 ಶಂಕಿತರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿದ್ದು, ಈ ಪೈಕಿ 32 ಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆಯಾಗಿದೆ. ರಾಜ್ಯದಲ್ಲಿ ಕೋವಿಡ್ ರೀ ಎಂಟ್ರಿಯಿಂದ ಎಚ್ಚೆತ್ತುಕೊಂಡಿರುವ ಆರೋಗ್ಯ ಇಲಾಖೆಯು ಮುನ್ನೆಚ್ಚರಿಕಾ ಕ್ರಮವಾಗಿ ಸಾರ್ವಜನಿಕರಿಗೆ ಹಾಗೂ ವೈದ್ಯಕೀಯ ಸಿಬ್ಬಂದಿಗೆ ಪ್ರಮುಖ ಸೂಚನೆಗಳನ್ನು ನೀಡಿದೆ. ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಕಡ್ಡಾಯವಾಗಿ ಮುನ್ನೆಚ್ಚರಿಕೆ ವಹಿಸುವಂತೆ ಸರ್ಕಾರ ಆದೇಶಿಸಿದೆ. ಇದರೊಂದಿಗೆ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ವಾರ್ಡ್‌ಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇಟ್ಟುಕೊಳ್ಳುವಂತೆ ಹಾಗೂ ಅಗತ್ಯ ವ್ಯವಸ್ಥೆಗಳ ಬಗ್ಗೆ ವಿಶೇಷ ಗಮನ ಹರಿಸುವಂತೆ ಸೂಚನೆ ನೀಡಲಾಗಿದೆ.

ಆಂಧ್ರ ಗಡಿಯಲ್ಲಿ ತೀವ್ರ ನಿಗಾ, ಚೆಕ್‌ಪೋಸ್ಟ್‌ಗಳ ನಿರ್ಮಾಣ

ನೆರೆ ರಾಜ್ಯವಾದ ಆಂಧ್ರಪ್ರದೇಶದಲ್ಲಿ ಕೋವಿಡ್ ಮಹಾಮಾರಿಗೆ ಇಬ್ಬರು ಬಲಿಯಾಗಿರುವ ಬೆನ್ನಲ್ಲೇ, ಆಂಧ್ರದೊಂದಿಗೆ ಗಡಿ ಹಂಚಿಕೊಂಡಿರುವ ಕರ್ನಾಟಕದ ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ಗಡಿ ಭಾಗಗಳಲ್ಲಿ ಈಗಾಗಲೇ ಕಟ್ಟುನಿಟ್ಟಿನ ಚೆಕ್‌ಪೋಸ್ಟ್‌ಗಳನ್ನು ನಿರ್ಮಿಸಲಾಗಿದ್ದು, ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗುತ್ತಿದೆ. ಗಡಿ ಜಿಲ್ಲೆಗಳ ಮೂಲಕ ಸೋಂಕು ರಾಜ್ಯದೊಳಗೆ ಮತ್ತಷ್ಟು ಹರಡದಂತೆ ತಡೆಯಲು ಇಲಾಖೆಯು ಸರ್ವ ಸನ್ನದ್ಧವಾಗಿದೆ.

ಆಂಧ್ರಪ್ರದೇಶದಲ್ಲಿ ಇಬ್ಬರು ಬಲಿ, ವೈದ್ಯಕೀಯ ವಿದ್ಯಾರ್ಥಿಗೂ ಸೋಂಕು

ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಕೋವಿಡ್-19 ಮತ್ತೆ ತೀವ್ರವಾಗಿ ಕಾಣಿಸಿಕೊಂಡಿದ್ದು, ಇತ್ತೀಚಿನ ವಾರಗಳಲ್ಲಿ ಒಟ್ಟು 8 ಪ್ರಕರಣಗಳು ವರದಿಯಾಗಿವೆ. ಆತಂಕಕಾರಿ ಸಂಗತಿಯೆಂದರೆ ಈ ಪ್ರಕರಣಗಳ ಪೈಕಿ ಇಬ್ಬರು ರೋಗಿಗಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಕಡಪ ಜಿಲ್ಲೆಯ ರಾಜಂಪೇಟ್ ಪ್ರದೇಶದ 52 ವರ್ಷದ ವ್ಯಕ್ತಿಯೊಬ್ಬರಿಗೆ ಜ್ವರ ಮತ್ತು ಕೆಮ್ಮು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷಿಸಿದಾಗ ಕೋವಿಡ್-19 ಪಾಸಿಟಿವ್ ದೃಢಪಟ್ಟಿತ್ತು. ತದನಂತರ ತಮಿಳುನಾಡಿನ ವೆಲ್ಲೂರಿನ ಕ್ರಿಶ್ಚಿಯನ್ ಮೆಡಿಕಲ್ ಕಾಲೇಜಿನಲ್ಲಿ (CMC) ಚಿಕಿತ್ಸೆ ಪಡೆಯುತ್ತಿದ್ದಾಗ ಅವರು ಮೃತಪಟ್ಟಿದ್ದಾರೆ.

ಇದೇ ಜಿಲ್ಲೆಯ ಮತ್ತೊಬ್ಬ ಕಡಪ ಮೂಲದ 43 ವರ್ಷದ ವ್ಯಕ್ತಿ ತೀವ್ರ ಆರೋಗ್ಯ ಸಮಸ್ಯೆಗಳಿಂದಾಗಿ ಅಲ್ಲಿನ ಸರ್ಕಾರಿ ಜನರಲ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರು ಕೋವಿಡ್-19 ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ಪಡೆಯುತ್ತಿದ್ದಾಗ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಇದರ ಬೆನ್ನಲ್ಲೇ ಕಡಪ ವೈದ್ಯಕೀಯ ಕಾಲೇಜಿನ 25 ವರ್ಷದ ವೈದ್ಯಕೀಯ ವಿದ್ಯಾರ್ಥಿನಿಗೂ ಸಹ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಮುಂಜಾಗ್ರತಾ ಕ್ರಮಗಳನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ.