S Shorts

ಕರ್ನಾಟಕದಲ್ಲಿ ಮುಂದಿನ 2 ದಿನ ವರುಣನ ಅಬ್ಬರ: ಬೆಂಗಳೂರು, ಕೋಲಾರಕ್ಕೆ ‘ಯೆಲ್ಲೋ ಅಲರ್ಟ್’ ಘೋಷಣೆ

ಕರ್ನಾಟಕದಲ್ಲಿ ಮುಂದಿನ 2 ದಿನ ವರುಣನ ಅಬ್ಬರ: ಬೆಂಗಳೂರು, ಕೋಲಾರಕ್ಕೆ ‘ಯೆಲ್ಲೋ ಅಲರ್ಟ್’ ಘೋಷಣೆ
Author: Sagaradventure
Posted By: Sagaradventure
Updated: Oct 23, 2026 | 10:46 AM

ಬೆಂಗಳೂರು: ಕರ್ನಾಟಕದಲ್ಲಿ ಮಳೆಯ ಅಬ್ಬರ ಇನ್ನೂ ಮುಂದುವರಿಯಲಿದ್ದು, ಅಕ್ಟೋಬರ್ 23 ಮತ್ತು 24ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆಯ (IMD) ಬೆಂಗಳೂರು ಕೇಂದ್ರ ನೀಡಿದೆ. ಇದರ ಬೆನ್ನಲ್ಲೇ ಬೆಂಗಳೂರು ಮತ್ತು ಕೋಲಾರ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ ಎಂದು ಹವಾಮಾನ ತಜ್ಞ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ.

ಮುಂದಿನ ಎರಡು ದಿನಗಳ ಕಾಲ ರಾಜ್ಯದ ವಿವಿಧ ಭಾಗಗಳಲ್ಲಿನ ಹವಾಮಾನ ವರದಿ ಈ ಕೆಳಗಿನಂತಿದೆ:

ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ: ಅಕ್ಟೋಬರ್ 23ರಂದು ಚಾಮರಾಜನಗರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ವೇಳೆ ಗಂಟೆಗೆ 30-40 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಹಾಸನ, ತುಮಕೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಅ. 24ರಂದು ಕೂಡ ಚಾಮರಾಜನಗರ ಮತ್ತು ಮೈಸೂರಿನಲ್ಲಿ ಭಾರಿ ಮಳೆಯಾಗಲಿದ್ದು, ಉಳಿದೆಡೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಕರಾವಳಿ ಕರ್ನಾಟಕದ ಸ್ಥಿತಿಗತಿ: ಅಕ್ಟೋಬರ್ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಕಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಡುಪಿಯಲ್ಲಿ ಸಾಧಾರಣದಿಂದ ಮಧ್ಯಮ ಮಳೆ ಹಾಗೂ ಉತ್ತರ ಕನ್ನಡದಲ್ಲಿ ಹಗುರ ಮಳೆಯಾಗುವ ಮುನ್ಸೂಚನೆ ಇದೆ. ಅಕ್ಟೋಬರ್ 24ರಂದು ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಸಾಧಾರಣ ಮಳೆಯಾಗಲಿದೆ.

ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆ: ಅಕ್ಟೋಬರ್ 23ರಂದು ಗದಗ, ಹಾವೇರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ 30-40 ಕಿ.ಮೀ. ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಹಗುರ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಬಹುತೇಕ ಒಣ ಹವಾಮಾನ ಮುಂದುವರಿಯಲಿದೆ. ಅ. 24ರಂದು ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಮಾತ್ರ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.