ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕೊಟ್ಟಿಗೆಹಾರದ ಪೆಟ್ರೋಲ್ ಬಂಕ್ ಮುಂಭಾಗ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಸಿಲಿಂಡರ್ ತುಂಬಿದ ಲಾರಿಗೆ ಕಾರು ಭೀಕರವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸ ಎಷ್ಟಿತ್ತೆಂದರೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ದುರ್ಮರಣವನ್ನಪ್ಪಿದ್ದಾರೆ.
ಮೃ*ತರ ಗುರುತು ಪತ್ತೆ, ಗಾಯಾಳುಗಳಿಗೆ ಚಿಕಿತ್ಸೆ
ಮೃ*ತರನ್ನು ತುಮಕೂರು ಜಿಲ್ಲೆಯ ಗುಬ್ಬಿ ಮೂಲದ ಗುರುಕಿರಣ್ (28), ಮೋಹನ್ (30) ಹಾಗೂ ಜ್ಞಾನೇಶ್ (28) ಎಂದು ಗುರುತಿಸಲಾಗಿದೆ. ಇನ್ನು ಕಾರಿನಲ್ಲಿದ್ದ ಪ್ರೇಮ್ ಕುಮಾರ್ ಮತ್ತು ಹೃತಿಕ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ರಕ್ಷಿಸಿ ಹಾಸನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಧರ್ಮಸ್ಥಳ ಪ್ರವಾಸಕ್ಕೆ ತೆರಳುತ್ತಿದ್ದಾಗ ದುರಂತ
ಮೃ*ತಪಟ್ಟವರು ಹಾಗೂ ಗಾಯಗೊಂಡವರು ಸೇರಿದಂತೆ ಎಲ್ಲರೂ ತುಮಕೂರಿನ ಗುಬ್ಬಿ ಮೂಲದವರಾಗಿದ್ದು, ಒಟ್ಟಾಗಿ ಧರ್ಮಸ್ಥಳಕ್ಕೆ ಪ್ರವಾಸಕ್ಕೆಂದು ತೆರಳುತ್ತಿದ್ದರು. ಈ ವೇಳೆ ಮಾರ್ಗಮಧ್ಯೆ ಈ ಭೀಕರ ದುರಂತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಬಣಕಲ್ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
