ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ನಿಷೇಧಕ್ಕೆ ಒತ್ತಾಯಿಸಿದ ಬೆನ್ನಲ್ಲೇ, ಆರೆಸ್ಸೆಸ್‌ನಿಂದ ಹರಿತವಾದ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆರ್‌ಎಸ್‌ಎಸ್‌ನ ಹಿರಿಯ ಮುಖಂಡರಾದ ದತ್ತಾತ್ರೇಯ ಹೊಸಬಾಳೆ ಅವರು ಖರ್ಗೆ ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದು, ಇತಿಹಾಸದಿಂದ ಪಾಠ ಕಲಿಯುವಂತೆ ತಿರುಗೇಟು ನೀಡಿದ್ದಾರೆ.
ಖರ್ಗೆ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಆರ್‌ಎಸ್‌ಎಸ್‌ನ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರು, ಖರ್ಗೆಯವರು ಹಿಂದಿನ ಅನುಭವಗಳಿಂದ ಪಾಠ ಕಲಿಯಬೇಕು. ಆರ್‌ಎಸ್‌ಎಸ್ ಅನ್ನು ನಿಷೇಧಿಸಲು ಹಿಂದೆ ಮಾಡಿದ ಪ್ರಯತ್ನಗಳು ವಿಫಲವಾಗಿವೆ. ಆರ್‌ಎಸ್‌ಎಸ್ ಅನ್ನು ಬ್ಯಾನ್ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದಿದ್ದಾರೆ. ಸಮಾಜವು ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು ಒಪ್ಪಿಕೊಂಡಿದೆ. ದೇಶದ ಜನತೆ ನಮ್ಮನ್ನು ಒಪ್ಪಿಕೊಂಡಿದ್ದಾರೆ. ಯಾರೋ ಬಯಸುತ್ತಾರೆ ಎಂಬ ಕಾರಣಕ್ಕೆ ಆರ್‌ಎಸ್‌ಎಸ್ ಅನ್ನು ಬ್ಯಾನ್ ಮಾಡಲು ಸಾಧ್ಯವಿಲ್ಲ ಎಂದಿದ್ದಾರೆ.
ಆರ್‌ಎಸ್‌ಎಸ್ ದೇಶದ ಸಾಂಸ್ಕೃತಿಕ ರಕ್ಷಕ. ಇಂತಹ ಸಂಘವನ್ನು ನಿಷೇಧಿಸಲು ಬಯಸುತ್ತೀರಿ, ಅದು ಸಾಧ್ಯವಿಲ್ಲ. ಆರ್‌ಎಸ್‌ಎಸ್ ಇದ್ದೇ ಇರುತ್ತದೆ. ನಾವು ದೇಶ ನಿರ್ಮಾಣದ ಕೆಲಸದಲ್ಲಿ ತೊಡಗಿದ್ದೇವೆ ಎಂದು ಹೊಸಬಾಳೆ ಅವರು ಕಾಂಗ್ರೆಸ್‌ಗೆ ತೀಕ್ಷ್ಣವಾಗಿ ತಿರುಗೇಟು ನೀಡಿದರು. ಈ ಹಿಂದೆಯೂ ದೇಶದಲ್ಲಿ ಆರ್‌ಎಸ್‌ಎಸ್ ಅನ್ನು ನಿಷೇಧಿಸಲು ಯತ್ನಗಳು ನಡೆದಿದ್ದವು, ಆದರೆ ಅವೆಲ್ಲವೂ ವಿಫಲವಾಗಿದ್ದವು. ಈ ಹಿನ್ನೆಲೆಯನ್ನೇ ಹೊಸಬಾಳೆ ಅವರು ತಮ್ಮ ಪ್ರತಿಕ್ರಿಯೆಯಲ್ಲಿ ಪ್ರಸ್ತಾಪಿಸಿದ್ದಾರೆ.
ಕೆಲವು ದಿನಗಳ ಹಿಂದೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ದೇಶದ ವಿವಿಧ ರಾಜ್ಯಗಳಲ್ಲಿ ಆರ್‌ಎಸ್‌ಎಸ್ ಅನ್ನು ನಿಷೇಧಿಸಬೇಕು ಎಂದು ಹೇಳಿಕೆ ನೀಡಿದ್ದರು.
