ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮಹತ್ವದ ಹಾಗೂ ದಿಢೀರ್ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ಅವರನ್ನು ಬಿಡುಗಡೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು (ರಾಜ್ಯ ಶಿಷ್ಟಾಚಾರ) ಏಪ್ರಿಲ್ 13, 2026 ರಂದು ಅಧಿಕೃತ ಅಧಿಸೂಚನೆಯನ್ನು ಪ್ರಕಟಿಸಿದ್ದು, ತಕ್ಷಣದಿಂದಲೇ ಜಾರಿಗೆ ಬರುವಂತೆ ಅವರನ್ನು ಹುದ್ದೆಯಿಂದ ಮುಕ್ತಗೊಳಿಸಲಾಗಿದೆ. ಯಾವುದೇ ಮುನ್ಸೂಚನೆ ಇಲ್ಲದೆ ದಿಢೀರನೆ ಈ ಬೆಳವಣಿಗೆ ನಡೆದಿರುವುದು ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಕಳೆದ ಜೂನ್ 01, 2023 ರಂದು ನಸೀರ್ ಅಹ್ಮದ್ ಅವರನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿತ್ತು. ಆದರೆ, ಇದೀಗ ಆ ಹಿಂದಿನ ನೇಮಕಾತಿ ಆದೇಶವನ್ನು ಹಿಂಪಡೆಯಲಾಗಿದೆ ಎಂದು ಸರ್ಕಾರದ ಅಧೀನ ಕಾರ್ಯದರ್ಶಿ ಅಭಿಜಿನ್ ಬಿ. ಅವರು ಹೊರಡಿಸಿರುವ ನೂತನ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.
ಸರ್ಕಾರದ ಈ ಅಧಿಸೂಚನೆಯ ಅನ್ವಯ, ನಸೀರ್ ಅಹ್ಮದ್ ಅವರನ್ನು ತಕ್ಷಣದಿಂದಲೇ ಹುದ್ದೆಯಿಂದ ಬಿಡುಗಡೆ ಮಾಡಲಾಗಿದೆ. ಈ ವಜಾ ಆದೇಶದ ಪ್ರತಿಯನ್ನು ಖುದ್ದು ನಸೀರ್ ಅಹ್ಮದ್ ಅವರಿಗೆ ರವಾನಿಸಲಾಗಿದೆ. ಇದರ ಜೊತೆಗೆ ನವದೆಹಲಿಯ ಕರ್ನಾಟಕ ಭವನದ ನಿವಾಸಿ ಆಯುಕ್ತರಿಗೆ, ಮಹಾಲೇಖಾಪಾಲರಿಗೆ ಹಾಗೂ ಮುಖ್ಯಮಂತ್ರಿಯವರ ಅಪರ, ಉಪ ಕಾರ್ಯದರ್ಶಿಗಳು ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳ ಉನ್ನತ ಮಟ್ಟದ ಅಧಿಕಾರಿಗಳಿಗೂ ಮಾಹಿತಿಗಾಗಿ ಕಳುಹಿಸಿಕೊಡಲಾಗಿದೆ.
