ಬೆಂಗಳೂರು: ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಹಾಗೂ ಈ ಅಕ್ರಮದಿಂದಾಗಿ ಮನನೊಂದು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳಲು ಕಾರಣರಾದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ (KPYCC) ಶನಿವಾರ ಬೆಂಗಳೂರಿನಲ್ಲಿ ಬೃಹತ್ ಪಂಜಿನ ಮೆರವಣಿಗೆ ನಡೆಸಿತು. ಕೆಪಿವೈಸಿಸಿ ರಾಜ್ಯಾಧ್ಯಕ್ಷ ಎಚ್.ಎಸ್. ಮಂಜುನಾಥ್ ಅವರ ನೇತೃತ್ವದಲ್ಲಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಜಮಾಯಿಸಿದ ನೂರಾರು ವಿದ್ಯಾರ್ಥಿಗಳು ಮತ್ತು ಯುವ ಕಾಂಗ್ರೆಸ್ ಕಾರ್ಯಕರ್ತರು, ಕೈಯಲ್ಲಿ ಪಂಜುಗಳನ್ನು ಹಿಡಿದು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. “ವಿದ್ಯಾರ್ಥಿಗಳ ಭವಿಷ್ಯ ಉಳಿಸಿ”, “ಪಾರದರ್ಶಕ ಶಿಕ್ಷಣ ವ್ಯವಸ್ಥೆ ಜಾರಿಗೊಳಿಸಿ” ಹಾಗೂ “ನೀಟ್ ಅಕ್ರಮದ ಕುರಿತು ನ್ಯಾಯಯುತ ತನಿಖೆ ನಡೆಸಿ” ಎಂದು ಘೋಷಣೆಗಳನ್ನು ಕೂಗುವ ಮೂಲಕ ಪ್ರತಿಭಟನಾಕಾರರು ಕೇಂದ್ರದ ನಿರ್ಲಕ್ಷ್ಯದ ಧೋರಣೆಯನ್ನು ತರಾಟೆಗೆ ತೆಗೆದುಕೊಂಡರು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕೆಪಿವೈಸಿಸಿ ರಾಜ್ಯಾಧ್ಯಕ್ಷ ಎಚ್.ಎಸ್. ಮಂಜುನಾಥ್, ದೇಶದ 23 ಲಕ್ಷ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡುತ್ತಿರುವ ಕೇಂದ್ರ ಬಿಜೆಪಿ ಸರ್ಕಾರವು ಭ್ರಷ್ಟಾಚಾರಮುಕ್ತ ಮತ್ತು ವಿಶ್ವಾಸಾರ್ಹ ಪರೀಕ್ಷಾ ವ್ಯವಸ್ಥೆಯನ್ನು ರೂಪಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಕಿಡಿಕಾರಿದರು.
ಇಷ್ಟೆಲ್ಲಾ ಅಕ್ರಮಗಳು ನಡೆದು ವಿದ್ಯಾರ್ಥಿಗಳು ಸಾವನ್ನಪ್ಪುತ್ತಿದ್ದರೂ, ಪ್ರಧಾನಿ ನರೇಂದ್ರ ಮೋದಿ ಅವರು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಜನ್ಮದಿನಕ್ಕೆ ಶುಭಾಶಯ ಕೋರಿ ಅವರ ಕಾರ್ಯವನ್ನು ಶ್ಲಾಘಿಸಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು, ಮೃತ ವಿದ್ಯಾರ್ಥಿಗಳಿಗೆ ಕನಿಷ್ಠ ಸಂತಾಪ ಸೂಚಿಸುವ ಸೌಜನ್ಯವೂ ಇಲ್ಲದ ಬಿಜೆಪಿ ನಾಯಕರಿಗೆ ನಾಚಿಕೆಯಾಗಬೇಕು ಎಂದು ಆಕ್ರೋಶ ಹೊರಹಾಕಿದರು. ಇದೇ ವೇಳೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ರಾಜಕೀಯೇತರ ಅಭಿಯಾನದ ಮೂಲಕ ವಿದ್ಯಾರ್ಥಿಗಳ ಪರವಾಗಿ ನಿಂತಿದ್ದಾರೆ ಎಂದು ನೆನಪಿಸಿದ ಮಂಜುನಾಥ್, ಈ ಹೋರಾಟವು ತಾರ್ಕಿಕ ಅಂತ್ಯ ಕಾಣುವವರೆಗೂ ಯುವ ಕಾಂಗ್ರೆಸ್ ವಿದ್ಯಾರ್ಥಿಗಳ ಬೆನ್ನಿಗೆ ನಿಲ್ಲಲಿದೆ ಎಂದು ಭರವಸೆ ನೀಡಿದರು.
ಈ ಬೃಹತ್ ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್ ರಾಷ್ಟ್ರೀಯ ಕಾರ್ಯದರ್ಶಿ ತಾರೀಖ್ ಭಾಗವಾನ್, ಕಾನೂನು ಘಟಕದ ರಾಜ್ಯಾಧ್ಯಕ್ಷ ಶ್ರೀಧರ್, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ರಾಹುಲ್ ಗೌಡ, ದಕ್ಷಿಣ ಜಿಲ್ಲಾಧ್ಯಕ್ಷ ಮೋನೀಶ್ ರೆಡ್ಡಿ, ಮತ್ತು ಪೂರ್ವ ಜಿಲ್ಲಾಧ್ಯಕ್ಷ ರಾಮ್ ನಾಯಕ್ ಸೇರಿದಂತೆ ಪ್ರಮುಖ ಪದಾಧಿಕಾರಿಗಳು ಹಾಗೂ ನೂರಾರು ಯುವ ಮುಖಂಡರು ಭಾಗವಹಿಸಿದ್ದರು.
