ಬಾಗಲಕೋಟೆ: ಯೂಟ್ಯೂಬ್‌ನಲ್ಲಿ ಜನಪ್ರಿಯ ಟ್ರೆಂಡಿಂಗ್ ಸ್ಟಾರ್ ಆಗಿ ಗುರುತಿಸಿಕೊಂಡಿರುವ ಜಾನಪದ ಗಾಯಕ ಮ್ಯೂಸಿಕ್ ಮೈಲಾರಿ ಸೇರಿದಂತೆ ಏಳು ಜನರ ವಿರುದ್ಧ ಪೋ*ಕ್ಸೋ (POCSO) ಕಾಯ್ದೆಯಡಿ ಗಂಭೀರ ಪ್ರಕರಣ ದಾಖಲಾಗಿದೆ. ಬೆಳಗಾವಿ ಮೂಲದ ಅಪ್ರಾಪ್ತ ಬಾಲಕಿಯ ಮೇಲೆ ಲೈಂ*ಗಿಕ ದೌರ್ಜನ್ಯ (Sexual Assault) ಎಸಗಿದ ಆರೋಪದ ಮೇಲೆ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಈ ಘಟನೆ 2025ರ ಅಕ್ಟೋಬರ್ 24 ರಂದು ಮಹಾಲಿಂಗಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವುದಾಗಿ ದೂರಿನಲ್ಲಿ ಆರೋಪಿಸಲಾಗಿದೆ.
ಬೆಳಗಾವಿ ಜಿಲ್ಲೆಯ ಗ್ರಾಮವೊಂದರಲ್ಲಿ ಹನುಮಂತ ದೇವರ ಓಕುಳಿ ಪ್ರಯುಕ್ತ ಆಯೋಜಿಸಿದ್ದ ಆರ್ಕೆಸ್ಟ್ರಾ ಕಾರ್ಯಕ್ರಮಕ್ಕೆ ಮ್ಯೂಸಿಕ್ ಮೈಲಾರಿ (Music Mailari) ಹಾಡಲು ಆಗಮಿಸಿದ್ದ. ಇದೇ ಆರ್ಕೆಸ್ಟ್ರಾದಲ್ಲಿ ಬಾಲಕಿ ಡ್ಯಾನ್ಸರ್ ಆಗಿ ಭಾಗವಹಿಸಿದ್ದಳು. ಕಾರ್ಯಕ್ರಮದ ವೇಳೆ ಬಾಲಕಿಯನ್ನು ಲಾಡ್ಜ್‌ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಬಾಲಕಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾಳೆ.
ಕೇವಲ ದೌರ್ಜನ್ಯವಷ್ಟೇ ಅಲ್ಲದೆ, ಆರೋಪಿಗಳು ಅತ್ಯಾಚಾರ ಎಸಗಿ ಅದನ್ನು ವಿಡಿಯೋ ಮಾಡಿಕೊಂಡಿದ್ದಾರೆ ಎಂದು ಬಾಲಕಿ ಗಂಭೀರ ಆರೋಪ ಮಾಡಿದ್ದಾಳೆ. ಈ ಅಪರಾಧದಲ್ಲಿ ಮ್ಯೂಸಿಕ್ ಮೈಲಾರಿ ಸೇರಿ ಒಟ್ಟು ಏಳು ಜನರು ಶಾಮೀಲಾಗಿದ್ದಾರೆ ಎಂದು ದೂರು ದಾಖಲಿಸಲಾಗಿದೆ.
ಬಾಲಕಿ ಡಿಸೆಂಬರ್ 14 ರಂದು ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಘಟನೆ ಮಹಾಲಿಂಗಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವುದರಿಂದ, ಪ್ರಕರಣವನ್ನು ಡಿಸೆಂಬರ್ 15 ರಂದು ಮಹಾಲಿಂಗಪುರ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ. ಸದ್ಯ ಮ್ಯೂಸಿಕ್ ಮೈಲಾರಿ ಸೇರಿದಂತೆ ಏಳು ಜನರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಮೊಕದ್ದಮೆ ದಾಖಲಿಸಲಾಗಿದೆ.
