S Shorts

ಅರಣ್ಯ ಇಲಾಖೆ ಭರ್ಜರಿ ಕಾರ್ಯಾಚರಣೆ: ಕಾರಿನಲ್ಲಿ ಸಾಗಿಸುತ್ತಿದ್ದ 21 ಕೆ.ಜಿ ಅಕ್ರಮ ಜಿಂಕೆ ಮಾಂಸ ವಶ, ಆರೋಪಿಗಳು ಎಸ್ಕೇಪ್!

ಅರಣ್ಯ ಇಲಾಖೆ ಭರ್ಜರಿ ಕಾರ್ಯಾಚರಣೆ: ಕಾರಿನಲ್ಲಿ ಸಾಗಿಸುತ್ತಿದ್ದ 21 ಕೆ.ಜಿ ಅಕ್ರಮ ಜಿಂಕೆ ಮಾಂಸ ವಶ, ಆರೋಪಿಗಳು ಎಸ್ಕೇಪ್!
Author: Sagaradventure
Posted By: Sagaradventure
Updated: Sep 5, 2026 | 12:47 PM

ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಪಟ್ಟಣದ ಶಬರೀಶ ನಗರದಲ್ಲಿ ಅರಣ್ಯ ಸಂಚಾರಿ ದಳದ ಸಿಬ್ಬಂದಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಮಾರಾಟದ ಉದ್ದೇಶದಿಂದ ಅಕ್ರಮವಾಗಿ ವಾಹನದಲ್ಲಿ ಸಾಗಿಸುತ್ತಿದ್ದ ಬರೋಬ್ಬರಿ 21 ಕೆ.ಜಿ ಜಿಂಕೆ ಮಾಂಸವನ್ನು ವಶಪಡಿಸಿಕೊಂಡಿದ್ದಾರೆ. 

ಖಚಿತ ಮಾಹಿತಿಯ ಮೇರೆಗೆ ಅರಣ್ಯ ಸಂಚಾರಿ ದಳದ ಪಿಎಸ್‌ಐ ವಿನಾಯಕ್ ಅವರ ನೇತೃತ್ವದ ಅಧಿಕಾರಿಗಳ ತಂಡವು ಶಬರೀಶ ನಗರದ ಆಯಕಟ್ಟಿನ ಜಾಗದಲ್ಲಿ ಈ ದಿಢೀರ್ ದಾಳಿ ಸಂಘಟಿಸಿ ಅಕ್ರಮವನ್ನು ಬೇಧಿಸುವಲ್ಲಿ ಯಶಸ್ವಿಯಾಗಿದೆ.

ಈ ಕಾರ್ಯಾಚರಣೆಯ ಸಂದರ್ಭದಲ್ಲಿ ಮಾರುತಿ ಎರ್ಟಿಗಾ ಕಾರಿನಲ್ಲಿ ಅತ್ಯಂತ ರಹಸ್ಯವಾಗಿ ಸಂಗ್ರಹಿಸಿಡಲಾಗಿದ್ದ 21 ಕೆ.ಜಿ ತೂಕದ ಜಿಂಕೆ ಮಾಂಸ ಪತ್ತೆಯಾಗಿದೆ. ಅಧಿಕಾರಿಗಳು ತಕ್ಷಣವೇ ಕಾರ್ಯಾಚರಣೆ ಚುರುಕುಗೊಳಿಸಿ ಮಾಂಸ ಹಾಗೂ ಸಾಗಾಟಕ್ಕೆ ಬಳಸಿದ್ದ ವಾಹನವನ್ನು ಜಪ್ತಿ ಮಾಡಿದ್ದಾರೆ. ಆದರೆ, ಅಧಿಕಾರಿಗಳು ದಾಳಿ ನಡೆಸಲು ಮುಂದಾಗಿರುವ ಸುಳಿವು ಅರಿತ ಆರೋಪಿಗಳು ಕ್ಷಣಾರ್ಧದಲ್ಲಿಯೇ ಸ್ಥಳದಿಂದ ಕಾಲ್ಕಿತ್ತಿದ್ದು, ಪರಾರಿಯಾಗುವಲ್ಲಿ ಯಶಸ್ವಿಯಾಗಿದ್ದಾರೆ.

ಸದ್ಯ ತಲೆಮರೆಸಿಕೊಂಡಿರುವ ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಅರಣ್ಯ ಇಲಾಖೆ ಅಧಿಕಾರಿಗಳು, ಶಂಕಿತರ ಪತ್ತೆಗಾಗಿ ತೀವ್ರ ಶೋಧ ಕಾರ್ಯ ಆರಂಭಿಸಿ ಬಲೆ ಬೀಸಿದ್ದಾರೆ. 

ಈ ದಾಳಿ ಕಾರ್ಯಾಚರಣೆಯಲ್ಲಿ ಅರಣ್ಯ ಸಂಚಾರಿ ದಳದ ಪ್ರಮುಖ ಸಿಬ್ಬಂದಿಗಳಾದ ಗಣೇಶ್ ಬಿ.ಸಿ., ಆಂಜನೇಯ ಪಾಟೀಲ್, ಚಂದ್ರಕಾಂತ್, ಸುರೇಶ್, ಪ್ರಮೋದಿನಿ ಹಾಗೂ ಹೆಚ್.ಬಿ. ದೊಡ್ಡಮನಿ ಅವರು ಸಕ್ರಿಯವಾಗಿ ಪಾಲ್ಗೊಂಡಿದ್ದರು.