ಬಾಗಲಕೋಟೆಯ ನವನಗರದ ಕೇಂದ್ರ ಬಸ್ ನಿಲ್ದಾಣಕ್ಕೆ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಸ್ ನಿಲ್ದಾಣದ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಹೋಟೆಲ್ ಹಾಗೂ ಬೇಕರಿಗಳಿಗೆ ತೆರಳಿ, ಅಲ್ಲಿನ ಆಹಾರ ತಯಾರಿಕಾ ವಿಧಾನ, ಸ್ವಚ್ಛತೆ ಮತ್ತು ಸಾರ್ವಜನಿಕ ಪ್ರಯಾಣಿಕರಿಗೆ ಒದಗಿಸಲಾಗುತ್ತಿರುವ ಮೂಲ ಸೌಲಭ್ಯಗಳ ಬಗ್ಗೆ ಖುದ್ದು ಪರಿಶೀಲನೆ ನಡೆಸಿದರು.
ಮಾಲೀಕರು ಮತ್ತು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ
ಹೋಟೆಲ್ ಮತ್ತು ಬೇಕರಿಗಳ ಆವರಣದಲ್ಲಿ ಸಮರ್ಪಕವಾಗಿ ಸ್ವಚ್ಛತೆ ಕಾಪಾಡದಿರುವುದನ್ನು ಗಮನಿಸಿದ ಉಪ ಲೋಕಾಯುಕ್ತರು, ಅಂಗಡಿ ಮಾಲೀಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಸಾರ್ವಜನಿಕರ ಹಾಗೂ ಪ್ರಯಾಣಿಕರ ಆರೋಗ್ಯದ ವಿಚಾರದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯವನ್ನು ಸಹಿಸುವುದಿಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದರು.
ಸ್ವಚ್ಛ ವಾತಾವರಣ ಕಲ್ಪಿಸಲು ಕಟ್ಟುನಿಟ್ಟಿನ ಸೂಚನೆ
ಬಸ್ ನಿಲ್ದಾಣದಲ್ಲಿ ಕಡ್ಡಾಯವಾಗಿ ಸ್ವಚ್ಛತೆ ಕಾಪಾಡಬೇಕು ಹಾಗೂ ನಿಯಮಾನುಸಾರ ಕಾರ್ಯನಿರ್ವಹಿಸಬೇಕು. ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಸ್ವಚ್ಛ ಮತ್ತು ಸುರಕ್ಷಿತ ವಾತಾವರಣ ಕಲ್ಪಿಸಲು ತಕ್ಷಣವೇ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಇದೇ ವೇಳೆ, ನವನಗರದಲ್ಲಿರುವ ‘108’ ನಾಯಿ ಸಂತಾನಹರಣ ಶಸ್ತ್ರಚಿಕಿತ್ಸೆ ಕೇಂದ್ರಕ್ಕೂ ಭೇಟಿ ನೀಡಿ ಕಾರ್ಯವೈಖರಿಯನ್ನು ಪರಿಶೀಲಿಸಿದರು.
