ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಆಯ್ಕೆಯಾಗಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗೆ ಸಂಬಂಧಿಸಿದಂತೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.
ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರನ್ನೊಳಗೊಂಡ ದ್ವಿಸದಸ್ಯ ಪೀಠವು ಈ ಮಹತ್ವದ ಆದೇಶವನ್ನು ನೀಡಿದೆ.
ಈ ಹಿಂದೆ ಅರ್ಜಿದಾರರು ಸಿದ್ದರಾಮಯ್ಯ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕೆಂದು ಕೋರಿ ಕರ್ನಾಟಕ ಹೈಕೋರ್ಟ್‌ನಲ್ಲಿ ತಕರಾರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರ ಪೀಠವು, ಕಳೆದ ಏಪ್ರಿಲ್ ತಿಂಗಳಲ್ಲಿ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿತ್ತು.
ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಅರ್ಜಿದಾರರು ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಮೇಲ್ಮನವಿಯನ್ನು ಪರಿಗಣಿಸಿರುವ ಸರ್ವೋಚ್ಚ ನ್ಯಾಯಾಲಯವು, ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡುವಂತೆ ಮುಖ್ಯಮಂತ್ರಿಗಳಿಗೆ ನೋಟಿಸ್ ನೀಡಿದೆ.
