ಹುಬ್ಬಳ್ಳಿ: ಯೋಗೇಶಗೌಡ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಶಾಸಕ ವಿನಯ್ ಕುಲಕರ್ಣಿ (Vinay Kulkarni) ಅವರ ಪರವಾಗಿ ಕಾಂಗ್ರೆಸ್ ( Congress) ಈಗ ಬಹಿರಂಗವಾಗಿ ಬೆಂಬಲಕ್ಕೆ ನಿಂತಿದೆ. ಶಾಸಕರನ್ನು ಬೆಂಬಲಿಸಿ ಮತ್ತು ಸರ್ಕಾರದ ನಡೆಗಳ ವಿರುದ್ಧ ಪ್ರತಿರೋಧ ವ್ಯಕ್ತಪಡಿಸಲು ಧಾರವಾಡದಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಮುಖಂಡರು ನಿರ್ಧರಿಸಿದ್ದಾರೆ. ಏಪ್ರಿಲ್ 25ಕ್ಕೆ ಮೌನ ಮೆರವಣಿಗೆ:
ವಿನಯ್ ಕುಲಕರ್ಣಿ ಅವರ ಪರವಾಗಿ ಜನಾಭಿಪ್ರಾಯ ಮೂಡಿಸಲು ಏಪ್ರಿಲ್ 25 ರಂದು ಧಾರವಾಡ ನಗರದಲ್ಲಿ ಬೃಹತ್ ಮೌನ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದೆ. ಈ ಮೂಲಕ ಶಾಸಕರ ಮೇಲಿನ ಕಾನೂನು ಪ್ರಕ್ರಿಯೆಗಳ ನಡುವೆಯೇ ರಾಜಕೀಯ ಶಕ್ತಿ ಪ್ರದರ್ಶನ ಮಾಡಲು ಕಾಂಗ್ರೆಸ್ ಮುಂದಾಗಿದೆ. ಈ ಮೆರವಣಿಗೆಯ ರೂಪರೇಷೆಗಳನ್ನು ಸಿದ್ಧಪಡಿಸಲು ನಿನ್ನೆ ರಾತ್ರಿ ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಮಹತ್ವದ ಸಭೆ ನಡೆಸಲಾಯಿತು.
ಧಾರವಾಡ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಕುಮಾರ್ ಪಾಟೀಲ್ ಅವರ ನೇತೃತ್ವದಲ್ಲಿ ಈ ಸಭೆ ನಡೆಯಿತು. ಸಭೆಯಲ್ಲಿ ಹುಬ್ಬಳ್ಳಿ-ಧಾರವಾಡ ಭಾಗದ ಹಿರಿಯ ಮತ್ತು ಎರಡನೇ ಹಂತದ ಅನೇಕ ಕಾಂಗ್ರೆಸ್ ಮುಖಂಡರು ಭಾಗವಹಿಸಿ, ಮೆರವಣಿಗೆಯನ್ನು ಯಶಸ್ವಿಗೊಳಿಸುವ ಬಗ್ಗೆ ಸುದೀರ್ಘ ಚರ್ಚೆ ನಡೆಸಿದರು. ಯೋಗೇಶಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಅವರು ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಅವರ ಬೆಂಬಲಿಗರು ಮತ್ತು ಪಕ್ಷದ ನಾಯಕರು ಈ ಮೌನ ಮೆರವಣಿಗೆಯ ಮೂಲಕ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಲಿದ್ದಾರೆ.
