ಬೆಂಗಳೂರು: ರಾಜ್ಯದಲ್ಲಿ ಹಿಂಗಾರು ಮಳೆಯ ಅಬ್ಬರ ಕೊಂಚ ತಗ್ಗಿದ್ದರೂ, ಕೆಲವು ಭಾಗಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನವೆಂಬರ್ 07ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ವರದಿಯಂತೆ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರಿಯಲಿದೆ.
ಪ್ರದೇಶಾವಾರು ಹವಾಮಾನ ವರದಿಯ ವಿವರ ಇಲ್ಲಿದೆ:
ಕರಾವಳಿ: ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಮತ್ತು ರಾತ್ರಿ ವೇಳೆಗೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಉಡುಪಿ ಜಿಲ್ಲೆಯ ಹೆಬ್ರಿ, ಕಾರ್ಕಳ ಹಾಗೂ ಸುತ್ತಮುತ್ತಲಿನ ಒಂದೆರಡು ಕಡೆ ಸಾಧಾರಣ ಮಳೆಯಾಗಲಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ನವೆಂಬರ್ 8ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿದ್ದು, ಉತ್ತರ ಕನ್ನಡದಲ್ಲಿ ಮಳೆಯ ಸಾಧ್ಯತೆ ಕಡಿಮೆಯಿದೆ.
ಮಲೆನಾಡು: ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ವಿವಿಧೆಡೆ ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಮಲೆನಾಡು ಭಾಗದಲ್ಲಿ ನವೆಂಬರ್ 8ರ ತನಕ ಇದೇ ವಾತಾವರಣ ಮುಂದುವರಿಯಲಿದೆ.
ದಕ್ಷಿಣ ಒಳನಾಡು: ರಾಜಧಾನಿ ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ವೇಳೆಗೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ತುಮಕೂರು ಜಿಲ್ಲೆಯ ಒಂದೆರಡು ಕಡೆ ಮಳೆಯಾಗಲಿದ್ದು, ಉಳಿದ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಈ ಭಾಗದಲ್ಲೂ ನವೆಂಬರ್ 8ರ ವರೆಗೆ ಮಳೆ ಮುಂದುವರಿಯುವ ಸಾಧ್ಯತೆಗಳಿವೆ.
ಉತ್ತರ ಒಳನಾಡು: ಉತ್ತರ ಭಾರತದ ಕಡೆಯಿಂದ ಬೀಸುತ್ತಿರುವ ಶುಷ್ಕ ಗಾಳಿಯ ಪರಿಣಾಮವಾಗಿ ರಾಜ್ಯದ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಆದರೆ, ರಾತ್ರಿ ವೇಳೆಗೆ ಕೊಂಚ ಚಳಿಯ ವಾತಾವರಣ ಇರಲಿದೆ.
ಮತ್ತೆ ವಾಯುಭಾರ ಕುಸಿತದ ಭೀತಿ: ನವೆಂಬರ್ 10ರ ಸುಮಾರಿಗೆ ಪೆಸಿಫಿಕ್ ಸಾಗರದ ಜಪಾನ್ ಕಡೆಯಿಂದ ಮ್ಯಾನ್ಮಾರ್, ಥೈಲ್ಯಾಂಡ್ ದೇಶಗಳನ್ನು ದಾಟಿ ಪ್ರಬಲವಾದ ಮಾರುತಗಳು ಬಂಗಾಳಕೊಲ್ಲಿಯತ್ತ ಬೀಸುವ ಸಾಧ್ಯತೆಗಳು ಗೋಚರಿಸುತ್ತಿವೆ. ಒಂದು ವೇಳೆ ಈ ಮಾರುತಗಳ ಪ್ರಭಾವದಿಂದ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದರೆ, ರಾಜ್ಯದಲ್ಲಿ ಮತ್ತೆ ಮಳೆಯ ಆಗಮನವಾಗುವ ಸಾಧ್ಯತೆಗಳಿವೆ. ಇದರ ನಿಖರ ಪರಿಣಾಮವನ್ನು ಮುಂದಿನ ದಿನಗಳಲ್ಲಿ ಕಾದು ನೋಡಬೇಕಿದೆ.
